ಸೋಮವಾರಪೇಟೆ, NEWS DESK ನ.26: ಮಕ್ಕಳ ಹಕ್ಕುಗಳು, ಮಕ್ಕಳ ಗ್ರಾಮಸಭೆ ಹಾಗೂ ಸ್ಥಳೀಯ ಆಡಳಿತ ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ವಿಶೇಷ ಜಾಗೃತಿ ಕಾರ್ಯಕ್ರಮವು ಬುಧವಾರ ಸೋಮವಾರಪೇಟೆ ಸಮೀಪದ ಹಾನಗಲ್ಲು ಶೆಟ್ಟಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆಯಿತು.
ನಾವು ಪ್ರತಿಷ್ಠಾನ ಟ್ರಸ್ಟ್ ಹಾಗೂ ಸಿಎಂಸಿಎ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳ ಗ್ರಾಮಸಭೆಯ ಪರಿಕಲ್ಪನೆ, ಉದ್ದೇಶ ಮತ್ತು ಮಹತ್ವದ ಕುರಿತು ಪ್ರತಿಷ್ಠಾನದ ಕಾರ್ಯಕಾರಿ ಮಂಡಳಿ ನಿರ್ದೇಶಕಿ ಸುಮನಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಮಕ್ಕಳ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಅಭಿವೃದ್ಧಿಯ ಹಕ್ಕು ಹಾಗೂ ಭಾಗವಹಿಸುವಿಕೆಯ ಹಕ್ಕುಗಳ ಕುರಿತು ವಿವಿಧ ಚಟುವಟಿಕೆಗಳ ಮೂಲಕ ಅರಿವು ಮೂಡಿಸಲಾಯಿತು. ಗ್ರಾಮ ಪಂಚಾಯಿತಿಯ ರಚನೆ, ಕಾರ್ಯವೈಖರಿ, ಜವಾಬ್ದಾರಿಗಳು ಹಾಗೂ ಗ್ರಾಮಮಟ್ಟದಲ್ಲಿ ಮಕ್ಕಳ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸ್ಥಳೀಯ ಆಡಳಿತದ ಪಾತ್ರದ ಬಗ್ಗೆಯೂ ತಿಳಿಸಿಕೊಡಲಾಯಿತು.
ಮಕ್ಕಳು ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ತಮ್ಮ ಗ್ರಾಮದ ಸಮಸ್ಯೆಗಳು, ಅಗತ್ಯಗಳು ಹಾಗೂ ಬೇಡಿಕೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಮೂಲಕ ಗ್ರಾಮಸಭೆಯಲ್ಲಿ ಅಭಿಪ್ರಾಯಗಳನ್ನು ಮಂಡಿಸಬೇಕು ಎಂದು ತಿಳಿಸಲಾಯಿತು.
ಮಕ್ಕಳ ಹಕ್ಕುಗಳ ರಕ್ಷಣೆ, ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡುವುದು ಹಾಗೂ ಮಕ್ಕಳ ಸ್ನೇಹಿ ಗ್ರಾಮ ಆಡಳಿತ ವ್ಯವಸ್ಥೆಯನ್ನು ರೂಪಿಸುವಲ್ಲಿ ಮಕ್ಕಳ ಗ್ರಾಮಸಭೆಯು ಮಹತ್ವದ ವೇದಿಕೆಯಾಗಿದೆ ಎಂದು ಸುಮನಾ ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಸುಕುಮಾರ್, ನಾವು ಪ್ರತಿಷ್ಠಾನ ಸಂಸ್ಥೆಯ ಸ್ಥಾಪಕ ಗೌತಮ್ ಹಾಗೂ ಸಂಸ್ಥೆಯ ಸ್ವಯಂಸೇವಕರು ಉಪಸ್ಥಿತರಿದ್ದರು.


































