ಸೋಮವಾರಪೇಟೆ, NEWS DESK ನ.27: ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆಯನ್ನು ತಕ್ಷಣ ಪರಿಹರಿಸದಿದ್ದಲ್ಲಿ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ರೈತ ಹೋರಾಟ ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಪಟ್ಟಣದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್, ಸರ್ಕಾರ ಹಾಗೂ ಜನಪ್ರತಿನಿಧಿಗಳು ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆಯ ಕುರಿತು ಅಧ್ಯಯನ ನಡೆಸಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಆದರೆ, ಒಂದು ವರ್ಷ ಕಳೆದರೂ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ ಎಂದು ಅವರು ಆರೋಪಿಸಿದರು.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರವನ್ನು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು. ಆದರೆ, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸರ್ಕಾರ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚಿಂತಿಸಿದಂತೆ ಕಾಣುತ್ತಿಲ್ಲ. ಇದು ಜಿಲ್ಲೆಯ ರೈತರ ಅಳಿವು-ಉಳಿವಿನ ಪ್ರಶ್ನೆಯಾಗಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸಲು ರಾಜ್ಯ ಸರ್ಕಾರದ ವರದಿ ಅಗತ್ಯವಿದೆ. ಆದ್ದರಿಂದ ಡಿಸೆಂಬರ್ 1ರೊಳಗೆ ಸಮಿತಿಯ ವರದಿಯನ್ನು ಪಡೆದು, ಡಿಸೆಂಬರ್ 2ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರ ವಿಳಂಬ ಧೋರಣೆ ಮುಂದುವರಿಸಿದರೆ ಅಧಿವೇಶನದ ಬಳಿಕ ಅಹೋರಾತ್ರಿ ಧರಣಿ ನಡೆಸುವುದರ ಜೊತೆಗೆ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸಲಾಗುವುದು ಎಂದು ಚಕ್ರವರ್ತಿ ಸುರೇಶ್ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಹೋರಾಟ ಸಮಿತಿಯ ಪ್ರಮುಖರಾದ ಮಿಥುನ್, ಸಂಪತ್, ಮಧು ಹಾಗೂ ನಾಗರಾಜ್ ಉಪಸ್ಥಿತರಿದ್ದರು.


































