ಕಾರುಗುಂದ, NEWS DESK ನ.28: ರೈತರ ಹಿತರಕ್ಷಣೆ ಹಾಗೂ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುವ ಉದ್ದೇಶದಿಂದ ಕಾರುಗುಂದ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನವೆಂಬರ್ 30ರಂದು ತುರ್ತು ಸಭೆ ಆಯೋಜಿಸಲಾಗಿದೆ.
ಸಭೆಯು ಸೋಮವಾರ ಬೆಳಿಗ್ಗೆ 10.30ಕ್ಕೆ ಚೇರಂಬಾಣೆಯ ಗೌಡ ಸಮಾಜ (ರಿ.) ಕಾರುಗುಂದ ಸಮುದಾಯ ಭವನದಲ್ಲಿ ನಡೆಯಲಿದೆ.
ಸಭೆಯಲ್ಲಿ ಸಿ ಮತ್ತು ಡಿ (ಪೈಸಾರಿ) ಜಮೀನುಗಳನ್ನು ಅರಣ್ಯ ಇಲಾಖೆಗೆ ವಶಪಡಿಸಿಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕಾವೇರಿ ನದಿ ಹಾಗೂ ಉಪನದಿಗಳ 300 ಮೀಟರ್ ವ್ಯಾಪ್ತಿಯನ್ನು ಬಫರ್ ಜೋನ್ ಎಂದು ಗುರುತಿಸುವ ಪ್ರಸ್ತಾವನೆಯಿಂದ ರೈತರು ತಮ್ಮ ಕಾಫಿ ತೋಟಗಳಿಗೆ ನೀರು ಹಾಯಿಸಲು ನಿರ್ಬಂಧ ಎದುರಾಗುವ ಆತಂಕದ ಬಗ್ಗೆಯೂ ಸಮಾಲೋಚನೆ ನಡೆಸಲಾಗುವುದು.
ಇದರೊಂದಿಗೆ ಮಾನವ–ವನ್ಯಜೀವಿ ಸಂಘರ್ಷದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಮಾರ್ಗೋಪಾಯಗಳ ಕುರಿತು ಚರ್ಚಿಸಲಾಗುವುದು.
ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ತೊಂದರೆ ನೀಡುವ ಸಂದರ್ಭಗಳಲ್ಲಿ ರೈತರು ಒಗ್ಗಟ್ಟಿನಿಂದ ಹೇಗೆ ಪ್ರತಿಕ್ರಿಯಿಸಬೇಕು ಹಾಗೂ ಮುಂದಿನ ಹೋರಾಟವನ್ನು ಯಾವ ರೀತಿಯಲ್ಲಿ ರೂಪಿಸಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಉದ್ದೇಶವಿದೆ.
ಆದ್ದರಿಂದ ಕಾರುಗುಂದ ಮತ್ತು ಸಂಪಾಜೆ ಹೋಬಳಿ ಹಾಗೂ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕರಿಸಬೇಕೆಂದು ಕಾರುಗುಂದ ರೈತ ಹಿತರಕ್ಷಣಾ ಸಮಿತಿ ಮನವಿ ಮಾಡಿದೆ.

































