ಕೊಡಗು ಕೋವಿಡ್ ಲಸಿಕಾ ಕಾರ್ಯಪಡೆ : ಪೂರ್ವಭಾವಿ ಸಮನ್ವಯ ಸಮಿತಿ ಸಭೆ

ಮಡಿಕೇರಿ ಅ.28 : ಕೋವಿಡ್-19 ಲಸಿಕಾ ಕಾರ್ಯಪಡೆಯ ಪೂರ್ವಭಾವಿ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಯುನಿಸೆಫ್, ರೋಟರಿ, ಲಯನ್ಸ್, ರೆಡ್‍ಕ್ರಾಸ್ ಹೀಗೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮ,ಣಿ ಜಾಯ್ ಅವರು ಕೋವಿಡ್-19 ಸಂಬಂಧ ಸರ್ಕಾರದ ಮಾರ್ಗಸೂಚಿ ವಿವರಿಸುವಂತೆ ತಿಳಿಸಿದರು.
ಈ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿದ ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್ ಅವರು ಕೋವಿಡ್-19 ಲಸಿಕೆಯು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಗೆ ಪಡೆದ ನಂತರ 2021 ರ ಆರಂಭದಲ್ಲಿ ಲಭ್ಯವಾಗುವ ನಿರೀಕ್ಷೆಯಿದ್ದು, ಆ ದಿಸೆಯಲ್ಲಿ ಪ್ರಥಮ ಹಂತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ, ಖಾಸಗಿ ಆಸ್ಪತ್ರೆಯ ಎಲ್ಲಾ ಹಂತದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಹಾಗೂ ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಶಿಕ್ಷಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸರ್ಕಾರದ ಮಾರ್ಗಸೂಚಿಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ, ಖಾಸಗಿ ಆಸ್ಪತ್ರೆಯ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಶಿಕ್ಷಕರು ಇವರಲ್ಲಿ (ಸರ್ಕಾರಿ, ಅರೆಕಾಲಿಕ, ಹೊರಗುತ್ತಿಗೆ, ಖಾಸಗಿ) ಯಾರ ಹೆಸರೂ ಬಿಟ್ಟು ಹೋಗದಂತೆ ನಿಖರ ಅಂಕಿ ಅಂಶಗಳನ್ನು ಒದಗಿಸುವಂತೆ ಅವರು ಸೂಚಿಸಿದರು.
ಜಿಲ್ಲಾಡಳಿತ ನೀಡುವ ಅಂಕಿ ಅಂಶಗಳ ವರದಿಯಂತೆ ಲಸಿಕೆ ಪೂರೈಕೆ ಆಗುವುದರಿಂದ ತಾಲೂಕು ವೈದ್ಯಾಧಿಕಾರಿಗಳು, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿ ಯಾರ ಹೆಸರೂ ಬಿಟ್ಟುಹೋಗದಂತೆ ನಿಖರ ಮಾಹಿತಿ ಒದಗಿಸಬೇಕು. ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಸರ್ಕಾರೇತರ ಸಂಸ್ಥೆಗಳು ರೋಟರಿ, ಲಯನ್ಸ್, ರೆಡ್‍ಕ್ರಾಸ್ ಇತರ ಸಂಘ ಸಂಸ್ಥೆಗಳು ಸಹಕಾರ ನೀಡಬೇಕೆಂದು ಕೋರಿದರು.
ಭಾರತೀಯ ವೈದ್ಯಕೀಯ ಜಿಲ್ಲಾ ಸಂಘದ ಡಾ.ಮೋಹನ್ ಅಪ್ಪಾಜಿ ಅವರು ಮಾತನಾಡಿ ಕೋವಿಡ್ ಲಸಿಕೆ ಬಳಕೆಗೂ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಅವರು ಸಲಹೆ ಮಾಡಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಡಾ.ವಿಶಾಲ್, ಡಾ.ಮಹೇಶ್, ಡಾ.ಆನಂದ್, ಡಾ.ರೂಪೇಶ್, ಡಾ.ಶೈಲಜಾ, ಮಡಿಕೇರಿ ರೋಟರಿ ಅಧ್ಯಕ್ಷರಾದ ಪಿ.ಟಿ.ಗಣಪತಿ, ರೋಟರಿ ಮಿಸ್ಟಿ ಹಿಲ್ಸ್ ಉಪಾಧ್ಯಕ್ಷರಾದ ಧನಂಜಯ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಮುರುಳೀಧರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಹಾಲಿಂಗಯ್ಯ, ಪೌರಾಯುಕ್ತರಾದ ಎಸ್.ವಿ ರಾಮದಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ನಾನಾ ಇಲಾಖೆಯ ಅಧಿಕಾರಿಗಳು ಇತರರು ಹಾಜರಿದ್ದರು.