ಜಿಲ್ಲಾ ಕಾಂಗ್ರೆಸ್‍ನಿಂದ ಇಂದಿರಾ ಸ್ಮರಣೆ : ಮಡಿಕೇರಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ

31/10/2020

ಮಡಿಕೇರಿ ಅ. 31 : ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 36ನೇ ಸಂಸ್ಮರಣೆ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆ ನಡೆಯಿತು. ರೈತ ಕಿಸಾನ್ ಅಧಿಕಾರ್ ದಿವಸ್ ಕಾರ್ಯಕ್ರಮದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರು ಮತ್ತು ಕಾರ್ಯಕರ್ತರು ಇಂದಿರಾ ಗಾಂಧಿ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
::: ಪ್ರತಿಭಟನೆ :::
ನಂತರ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ಸಿಗರು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಸರ್ಕಾರ ರೈತರು ಹಾಗೂ ಕೂಲಿ ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ಅವರ ಬದುಕನ್ನು ನಾಶ ಮಾಡಲು ಹೊರಟಿದೆ ಎಂದು ಟೀಕಿಸಿದರು.
ರೈತರ ಹಾಗೂ ಕಾರ್ಮಿಕರ ಸಾಲವನ್ನು ತಕ್ಷಣ ಮನ್ನಾ ಮಾಡಬೇಕು, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು.
ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಮಾತನಾಡಿ ಸಣ್ಣ ಹಿಡುವಳಿದಾರರಿಗೆ ಕೇಂದ್ರ ಸರ್ಕಾರದ ಹೊಸ ನೀತಿಯಿಂದ ತೊಂದರೆಯುಂಟಾಗಿದ್ದು, ಕೃಷಿ ಕಾರ್ಯ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡವಾಳಶಾಹಿಗಳಿಗೆ ಮಣೆ ಹಾಕಿ ದೇಶದ ಕೃಷಿ ವ್ಯವಸ್ಥೆ ಹಾಳು ಮಾಡಲು ಕೇಂದ್ರ ಮುಂದಾಗಿದೆ. ಎಪಿಎಂಸಿ ಕಾಯ್ದೆಯಿಂದಲೂ ಸಾಕಷ್ಟು ತೊಂದರೆಯಾಗಿದೆ ಎಂದು ಆರೋಪಿಸಿದರು.
::: ಚುನಾವಣೆಯಲ್ಲಿ ಗೆಲುವು :::
ಇದೇ ಸಂದರ್ಭ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜನ ಕಾಂಗ್ರೆಸ್ ಪಕ್ಷದ ಪರ ಇದ್ದು, ಶಿರಾದಲ್ಲಿ ಜಯಚಂದ್ರ ಅವರು ಮಾಡಿದ ಉತ್ತಮ ಕಾರ್ಯಗಳು ಜಯ ತಂದುಕೊಡಲಿದೆ. ಆರ್‍ಆರ್ ನಗರದಲ್ಲಿ ಮುನಿರತ್ನ ಅವರಿಗೆ ಸೋಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಪರಿಷತ್ ಸದಸ್ಯೆ ವೀಣಾಅಚ್ಚಯ್ಯ, ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಡಿಸಿಸಿ ಖಜಾಂಚಿ ಹೆಚ್.ಎಂ.ನಂದಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯರಾದ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಪಾರ್ವತಿ ಫ್ಯಾನ್ಸಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಯೋಜಕ ತೆನ್ನಿರ ಮೈನಾ, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ, ಎಸ್‍ಸಿ ಘಟಕದ ಅಧ್ಯಕ್ಷ ಮುದ್ದುರಾಜು, ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಹಿಳಾ ಅಧ್ಯಕ್ಷೆ ರಾಜೇಶ್ವರಿ, ಸೇವಾದಳದ ಬ್ಲಾಕ್ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ನಗರಾಧ್ಯಕ್ಷ ರಮೇಶ್, ಜಿಲ್ಲಾ ಮಹಿಳಾ ಅಧ್ಯಕ್ಷರಾದ ಪ್ರೇಮ ಕೃಷ್ಣಪ್ಪ, ನಗರಸಭೆ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಜುಲೇಕಾಬಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.