ಜಿಲ್ಲೆಯ ಗ್ರಾಮೀಣ ಭಾಗದ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸಂಪರ್ಕ ಒದಗಿಸಿ: ಸಂಸದ ಪ್ರತಾಪ್ ಸಿಂಹ ಸೂಚನೆ

ಮಡಿಕೇರಿ ನ. 4 : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ‘ಜಲ ಜೀವನ್ ಮಿಷನ್’ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತೀ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು ಎಂಬುದು ಆಶಯವಾಗಿದ್ದು, ಆ ನಿಟ್ಟಿನಲ್ಲಿ ಜಲ ಜೀವನ್ ಮಿಷನ್’ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ಇದುವರೆಗೆ ಎಷ್ಟು ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ ಎಂದು ಸಂಸದರು ಮಾಹಿತಿ ಪಡೆದರು.
ಈ ಕುರಿತು ಮಾಹಿತಿ ನೀಡಿದ ಜಿ.ಪಂ.ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಅವರು ಜಿಲ್ಲೆಯಲ್ಲಿ 46,276 ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರಾದ ಪ್ರತಾಪ್ ಸಿಂಹ ಅವರು ಜಿಲ್ಲೆಯಲ್ಲಿ ಬಹುಮುಖ್ಯವಾಗಿ ಕುಡಿಯುವ ನೀರು, ವಿದ್ಯುತ್ ಮತ್ತು ರಸ್ತೆ ಸಂಪರ್ಕಕ್ಕೆ ಆದ್ಯತೆ ಇದ್ದು, ಈ ನಿಟ್ಟಿನಲ್ಲಿ ವಿಶೇಷ ಗಮನಹರಿಸಬೇಕಿದೆ ಎಂದು ಅವರು ಸಲಹೆ ಮಾಡಿದರು.
ಕೋವಿಡ್ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ಸಂಬಂಧ ಜಯದೇವ ಆಸ್ಪತ್ರೆ ನಿರ್ದೇಶಕರಾದ ಡಾ.ಮಂಜುನಾಥ ಅವರಲ್ಲಿ ಮನವಿ ಮಾಡಲಾಗಿದ್ದು, ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಮುಂದಾಗಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
400 ಹಾಸಿಗೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ ಅವರು ಮಾಹಿತಿ ನೀಡಿದರು.
ವೈದ್ಯಕೀಯ ಕಾಲೇಜು ಹಾಗೂ ಕೋವಿಡ್ ಆಸ್ಪತ್ರೆಗೆ ಹೆಚ್ಚಿನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಬೇಕಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಪ್ರತಾಪ್ ಸಿಂಹ ಅವರು ಸಲಹೆ ಮಾಡಿದರು.
ಜಿಲ್ಲಾಸ್ಪತ್ರೆಯಲ್ಲಿ ಕಿವಿ ಪರೀಕ್ಷೆ ಸೇರಿದಂತೆ ಹೊಸ ಹೊಸ ವೈದ್ಯಕೀಯ ತಂತ್ರಜ್ಞಾನಗಳು ಬಂದಿದ್ದು, ಚಿಕ್ಕ ಮಕ್ಕಳು ಪರೀಕ್ಷೆ ಮಾಡಿಸಿಕೊಂಡಾಗ, ನ್ಯೂನತೆ ಕಂಡುಬಂದಲ್ಲಿ ಸರಿಪಡಿಸಿಕೊಳ್ಳಲು ಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಪ್ರತಾಪ್ ಸಿಂಹ ಅವರು ತಿಳಿಸಿದರು.
ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡುತ್ತಿದ್ದು, ಪಂಚಾಯಿತಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಗೊಬ್ಬರ ತಯಾರಿಸುವುದು, ಅಂಗನವಾಡಿ, ಶಾಲೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ಆಸ್ಪತ್ರೆಗಳ ಉದ್ಯಾನವನ ಅಭಿವೃದ್ಧಿ ಪಡಿಸುವುದು, ಸ್ವಚ್ಛ ಸುಂದರ ಗ್ರಾಮಗಳನ್ನಾಗಿ ಮಾಡಬೇಕು ಎಂದು ಅವರು ಸೂಚಿಸಿದರು.
ಈಗಾಗಲೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹೆಸರು ನೋಂದಾಯಿಸಿರುವವರಿಗೆ ಕೆಲಸ ನೀಡಬೇಕು. ಶೌಚಾಲಯ ನಿರ್ಮಾಣ, ಕುರಿ ದೊಡ್ಡಿ ನಿರ್ಮಾಣ, ಕಾಂಕ್ರೀಟ್ ರಸ್ತೆ ನಿರ್ಮಾಣ ಹೀಗೆ ಹಲವು ಯೋಜನೆಗಳನ್ನು ಕೈಗೊಳ್ಳಬೇಕು ಎಂದು ಪ್ರತಾಪ್ ಸಿಂಹ ಅವರು ನಿರ್ದೇಶನ ನೀಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೆಲಸಗಳಿಗೆ ಹಣದ ಕೊರತೆಯಿಲ್ಲ. ಆದರೆ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಸದರು ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು. ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಕ್ರಮವಹಿಸಬೇಕು. ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಥಮ/ ದ್ವಿತೀಯ ಸ್ಥಾನದಲ್ಲಿದ್ದು, ಕೊಡಗು ಜಿಲ್ಲೆ ಏಕೆ 18 ನೇ ಸ್ಥಾನದಲ್ಲಿದೆ ಎಂದು ಅವರು ಪ್ರಶ್ನಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ ಅವರು ಕಳೆದ ಬಾರಿ 22 ನೇ ಸ್ಥಾನದಲ್ಲಿತ್ತು, ಈ ಬಾರಿ 18 ನೇ ಸ್ಥಾನಕ್ಕೆ ತರಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸಂಬಂಧಿಸಿದಂತೆ ಗಣಿತ ಮತ್ತು ವಿಜ್ಞಾನ ವಿಷಯಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು ಫಲಿತಾಂಶ ಉತ್ತಮ ಪಡಿಸುವಂತೆ ಪ್ರತಾಪ್ ಸಿಂಹ ಅವರು ಸೂಚಿಸಿದರು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಸಿಮೆಂಟ್ ರಸ್ತೆಗಳನ್ನು ನಿರ್ಮಿಸಬೇಕು. ಆ ನಿಟ್ಟಿನಲ್ಲಿ ಈಗಾಗಲೇ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿನಲ್ಲಿ ಇದೇ 12 ರಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರ ಉಪಸ್ಥಿತಿಯಲ್ಲಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಸಂಸದರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಕೊಲ್ಲೀರ ಗೋಪಿ ಚಿನ್ನಪ್ಪ ಮತ್ತು ಸೋಮವಾರಪೇಟೆ ತಾ.ಪಂ.ಅಧ್ಯಕ್ಷರಾದ ಪುಷ್ಪ ಅವರು ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕಿನ ಹಲವು ರಸ್ತೆಗಳು ಹದಗೆಟ್ಟಿದ್ದು, ಸರಿಪಡಿಸುವ ಕಾರ್ಯವಾಗಬೇಕು ಎಂದು ಅವರು ಗಮನ ಸೆಳೆದರು.
ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯಡಿ ಮೊಟ್ಟೆ ಸೇರಿದಂತೆ ಪೌಷ್ಠಿಕ ಆಹಾರವನ್ನು ವಿತರಣೆ ಮಾಡಬೇಕು. ಹಾಡಿಗಳಿಗೆ ಸರ್ಕಾರದ ಸವಲತ್ತು ತಲುಪಿಸಬೇಕು ಎಂದು ಸಂಸದರು ಸೂಚಿಸಿದರು.
ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಜಿಲ್ಲೆಯಲ್ಲಿ 58 ಸಾವಿರಕ್ಕೂ ಹೆಚ್ಚು ಆದಿವಾಸಿ ಗಿರಿಜನರಿದ್ದು, ಇವರಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್ ತಲುಪಿಸಲಾಗುತ್ತಿದೆ. ಮನೆ ನಿರ್ಮಾಣ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ಸಂಬಂಧ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಗಿರಿಜನರಿಗೆ ಮನೆ ನಿರ್ಮಾಣ ಸಂಬಂಧಿಸಿದಂತೆ ಬಿಲ್ಲುಗಳು ಆಗುತ್ತಿಲ್ಲ. ಇದರಿಂದಾಗಿ ಮನೆ ಕಾಮಗಾರಿ ಪ್ರಗತಿಯಾಗುತ್ತಿಲ್ಲ ಎಂದು ಸಂಸದರ ಗಮನಕ್ಕೆ ತಂದರು.
ಸೆಸ್ಕ್ ಇಲಾಖೆಯಿಂದ ಸೌಭಾಗ್ಯ ಯೋಜನೆಯಡಿ ಬಾಕಿ ಇರುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸಂಸದರು ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಸೋಮಶೇಖರ್ ಅವರು ಜಿಲ್ಲೆಯಲ್ಲಿ ಸೌಭಾಗ್ಯ ಯೋಜನೆಯಡಿ 3,700 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, 400 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊಲ್ಲೀರ ಚಿನ್ನಪ್ಪ ಅವರು ಜಿಲ್ಲೆಯಲ್ಲಿ ಸೌಭಾಗ್ಯ ಯೋಜನೆ ಪ್ರಗತಿ ಕಾಣುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಬಾಳೆಲೆ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ತುಂಬಾ ವ್ಯತ್ಯಯ ಉಂಟಾಗುತ್ತಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಸಮಿತಿ ಸದಸ್ಯರೊಬ್ಬರು ಗಮನ ಸೆಳೆದರು. ಮತ್ತೊಬ್ಬ ಸದಸ್ಯರು ತಿತಿಮತಿ ವ್ಯಾಪ್ತಿಯಲ್ಲಿ ಸೀಮೆ ಎಣ್ಣೆಯನ್ನು ಸರಿಯಾಗಿ ಪೂರೈಸುತ್ತಿಲ್ಲ ಎಂದರು.
ಈ ಬಗ್ಗೆ ಮಾಹಿತಿ ನೀಡಿದ ಸೋಮಶೇಖರ್ ಅವರು ಬಾಳೆಲೆಯಲ್ಲಿ ಟ್ರಾನ್ಸ್ಫಾರ್ಮ್ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯಗಳು ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಅವರು ಮಾತನಾಡಿ ಮಡಿಕೇರಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಮಡಿಕೇರಿ ನಗರ ವ್ಯಾಪ್ತಿಯ ಪ್ರತೀ ವಾರ್ಡ್ಗೆ ಪೌರಾಯುಕ್ತರು ಭೇಟಿ ನೀಡಿ ಸಮಸ್ಯೆ ಆಲಿಸಬೇಕು. ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರ ಪೂರೈಕೆ ಮಾಡಲಾಗುತ್ತಿದೆಯೇ. ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕವನ್ನು ಎಷ್ಟು ಕುಟುಂಬಗಳಿಗೆ ಕಲ್ಪಿಸಲಾಗಿದೆ ಎಂದು ಮಾಹಿತಿ ಒದಗಿಸುವಂತೆ ಪ್ರತಾಪ್ ಸಿಂಹ ಅವರು ತಿಳಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ಉಜ್ವಲ ಯೋಜನೆಯಡಿ 3,778 ಕುಟುಂಬಗಳ ಫಲಾನುಭವಿಗಳಿದ್ದಾರೆ ಎಂದರು.
ಕೃಷಿ ಇಲಾಖೆಯಡಿ ಕೃಷಿ ಯಂತ್ರೋಪಕರಣಗಳನ್ನು ಒದಗಿಸುವುದರ ಜೊತೆಗೆ ರಸ ಗೊಬ್ಬರ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೊಲ್ಲೀರ ಗೋಪಿ ಚಿನ್ನಪ್ಪ ಅವರು ಕೃಷಿ ಇಲಾಖೆಯಿಂದ ಟಿಲ್ಲರ್ ಬದಲಾಗಿ ಟ್ರ್ಯಾಕ್ಟರ್ಗೆ ಹೆಚ್ಚು ಬೇಡಿಕೆಯಿದ್ದು, ಟ್ರ್ಯಾಕ್ಟರ್ ಒದಗಿಸಬೇಕು ಎಂದು ಅವರು ಮನವಿ ಮಾಡಿದರು.
ಕೃಷಿಕರಿಗೆ ಸರ್ಕಾರದ ಸೌಲಭ್ಯಗಳು ತಲುಪುವ ನಿಟ್ಟಿನಲ್ಲಿ ಕುಟುಂಬದವರಿಗೆ ಜಮೀನು ಖಾತೆ ಮಾಡಿಕೊಳ್ಳುವಂತಾಗಲು ಸರ್ಕಾರ ಪೌತಿ ಖಾತೆ ಆಂದೋಲನ ಆರಂಭಿಸಿದೆ. ಅದನ್ನು ಬಳಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಜಿಲ್ಲೆಯಲ್ಲಿ ಇದುವರೆಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಎಷ್ಟು ಗುರುತಿನ ಚೀಟಿ ವಿತರಿಸಲಾಗಿದೆ ಎಂದು ಮಾಹಿತಿ ಪಡೆದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಇದುವರೆಗೆ 4,25,462 ಮಂದಿಗೆ ಕಾರ್ಡು ವಿತರಿಸಲಾಗಿದ್ದು, ಶೇ.75ರಷ್ಟು ಪ್ರಗತಿ ಸಾಧಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.
ಪ್ರಕೃತಿ ವಿಕೋಪದಿಂದ ಕಾಫಿ ಬೆಳೆ ಹಾನಿ ಸಂಬಂಧಿಸಿದಂತೆ ಮಾಹಿತಿಯನ್ನು ಸಂಸದರು ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಯಲ್ಲಿ ಇದುವರೆಗೆ ಕಾಫಿ ಬೆಳೆ ಹಾನಿ ಸಂಬಂಧಿಸಿದಂತೆ 20 ಸಾವಿರ ಅರ್ಜಿಗಳು ದಾಖಲಾಗಿದ್ದು, ಕಾಫಿ ಬೆಳೆ ಹಾನಿ ಸಂಬಂಧಿಸಿದಂತೆ ಬಿಟ್ಟು ಹೋಗದಂತೆ ಕಾಫಿ ಮಂಡಳಿ ಅಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು. ಈ ಸಂಬಂಧ ಮತ್ತೊಮ್ಮೆ ಪರಿಶೀಲಿಸುವಂತೆ ಅವರು ಸೂಚಿಸಿದರು.
ಕಾಫಿ ಬೆಳೆ ಹಾನಿ ಸಂಬಂಧ ಬಾಳೆಲೆ ವ್ಯಾಪ್ತಿಯಲ್ಲಿ ಯಾವುದೇ ಅರ್ಜಿಗಳು ದಾಖಲಾಗದಿರುವ ಬಗ್ಗೆ ಗಮನಹರಿಸಬೇಕು. ಕಾಫಿ ಮಂಡಳಿಯವರು ಹೋಬಳಿವಾರು ಕಾಫಿ ಬೆಳೆ ಹಾನಿ ಸಂಬಂಧ ಕಂದಾಯ ಇಲಾಖೆಗೆ ದೃಢೀಕೃತ ಮಾಹಿತಿ ನೀಡುವಂತೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಕೋವಿಡ್ 19 ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ತಾ.ಪಂ.ಇಒಗಳಾದ ಲಕ್ಷ್ಮಿ (ಮಡಿಕೇರಿ), ಜಯಣ್ಣ (ಸೋಮವಾರಪೇಟೆ) ಮತ್ತು ಅಪ್ಪಣ್ಣ (ವಿರಾಜಪೇಟೆ) ಅವರು ತಮ್ಮ ಇಲಾಖೆಯ ವ್ಯಾಪ್ತಿಯ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ ಇತರರು ಇದ್ದರು.


