ಗೋಹತ್ಯೆ ತಡೆಗೆ ವಿಶೇಷ ಕಾರ್ಯಪಡೆ ರಚನೆ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಮುನ್ಸೂಚನೆ

06/11/2020

ಮಡಿಕೇರಿ ನ.6 : ಗೋಹತ್ಯೆ ಹಾಗೂ ಗೋವು ಕಳ್ಳಸಾಗಾಟ ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆಯೊಂದನ್ನು ರಚಿಸುವ ಚಿಂತನೆ ಇರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ಹಾಗೂ ಗೋವು ಕಳ್ಳಸಾಗಾಟ ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರಕಾರೇತರ ಸಂಸ್ಥೆಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಈ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಗೋ ಹತ್ಯೆಯ ಜೊತೆಗೆ ಗೋವು ಕಳ್ಳಸಾಗಾಟ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರತ್ಯೇಕವಾದ ಕಾರ್ಯಪಡೆಯೊಂದನ್ನು ರಚಿಸುವ ಚಿಂತನೆಯೂ ಇದೆ ಎಂದು ಅವರು ನುಡಿದರು.
ಕೊರೋನಾ ಲಾಕ್‍ಡೌನ್ ಸಂದರ್ಭದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣ ನಿಯಂತ್ರಣದಲ್ಲಿದ್ದರೂ, ಇದೀಗ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ವಿಶೇಷವಾಗಿ ಕೊಲೆ, ಅತ್ಯಾಚಾರ ಪ್ರಕರಣಗಳ ಬಗ್ಗೆ ನಿಗಾವಹಿಸುವಂತೆ ಹಾಗೂ ದಸ್ತಗಿರಿಯಾದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
::: ಪರಿಹಾರ ಹೆಚ್ಚಳಕ್ಕೆ ಕ್ರಮ :::
ಕೊಡಗು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಆದರೆ ಜಿಲ್ಲೆಯಲ್ಲಿ ಕಾಡಾನೆ ಹಾವಳಿಯಿಂದಾಗಿ ಬೆಳೆ ಹಾನಿಯೊಂದಿಗೆ ಜೀವ ಹಾನಿಯೂ ಆಗುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಸರಕಾರ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸಬೇಕೆಂಬ ಕೂಗು ಹಿಂದಿನಿಂದಲೂ ಇದೆ. ಇಲ್ಲವಾದಲ್ಲಿ ಇದು ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳ ಗಮನಸೆಳೆಯಲಾಗುವುದು ಎಂದರು.
ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯನ್ನು ಬಲವರ್ಧನೆಗೊಳಿಸಲು ಗೃಹ ಇಲಾಖೆ ಬದ್ಧವಾಗಿದ್ದು, ಈಗಾಗಲೇ ಇರುವ ಪೊಲೀಸ್ ಅಧೀಕ್ಷಕರ ಕಚೇರಿ ಹಳೆಯದಾಗಿರುವುದರಿಂದ ನೂತನ ಕಚೇರಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಮುಂದಿನ ಬಜೆಟ್‍ನಲ್ಲಿ ಇದಕ್ಕಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ನುಡಿದರು.
ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ 95 ಸಿವಿಲ್ ಹಾಗೂ 39 ಸಶಸ್ತ್ರ ಪೊಲೀಸ್ ಸಿಬ್ಬಂದಿಗಳ ಕೊರತೆ ಇದ್ದು, ಎರಡು ಹಂತಗಳಲ್ಲಿ ಸಿಬ್ಬಂದಿ ನೇಮಕಾತಿಗೆ ಕ್ರಮ ವಹಿಸಲಾಗುವುದು. ಮೊದಲ ಹಂತದಲ್ಲಿ ಶೇ.70ರಷ್ಟು ಸಿಬ್ಬಂದಿಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉಳಿದವುಗಳನ್ನು ಏಪ್ರಿಲ್—ಮೇ ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಮಾದಕ ವಸ್ತು ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಈ ನಡುವೆ ಕೆಲವು ಔಷಧಿ ಅಂಗಡಿಗಳಲ್ಲಿ ವೈದ್ಯರ ಶಿಫಾರಸ್ಸು ಇಲ್ಲದೆಯೇ ಮಾದಕ ವಸ್ತುಗಳಿರುವ ನಿಷೇಧಿತ ಔಷಧಿಗಳನ್ನು ಮಾರಾಟ ಮಾಡುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿದ್ದು, ಇದನ್ನು ನಿಯಂತ್ರಿಸುವಂತೆ ಡ್ರಗ್ಸ್ ಕಂಟ್ರೋಲರ್‍ರವರಿಗೆ ತಿಳಿಸಲಾಗಿದೆ. ಈ ಸಂಬಂಧ ಅವರಿಂದ ಸೂಕ್ತ ಭರವಸೆ ದೊರಕಿದ್ದು, ಇದರೊಂದಿಗೆ ಪೊಲೀಸ್ ಇಲಾಖೆಯೂ ಅಂತಹ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಿದೆ ಬೊಮ್ಮಾಯಿ ತಿಳಿಸಿದರು.
::: ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮ :::
ಕೊಡಗು ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಂತಹ ಹೋಂಸ್ಟೇಗಳ ವಿರುದ್ಧ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧವೂ ಶಿಸ್ತುಕ್ರಮ ಜರಗಿಸಲಾಗುವುದು ಎಂದು ಎಚ್ಚರಿಸಿದರು.