ಶಿರಂಗಾಲ ಶೀತ ಪ್ರದೇಶದಲ್ಲಿರುವ ಗ್ರಾಮಸ್ಥರಿಗೆ ಪುನರ್ವಸತಿ ಕಲ್ಪಿಸಲು ಜೆಡಿಎಸ್ ಆಗ್ರಹ

09/11/2020

ಮಡಿಕೇರಿ ನ.9 : ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಹಾರಂಗಿ ಸಮೀಪ ಹಲವು ವರ್ಷಗಳಿಂದ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ನಿವಾಸಿಗಳಿಗೆ ಗುರುತಿಸಿರುವ ಜಾಗದಲ್ಲಿ ಶೀಘ್ರ ವಸತಿ ಯೋಜನೆಯನ್ನು ಅನುಷ್ಠಾನಗೊಳಿಸದಿದ್ದಲ್ಲಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದಿಂದ ಉಪವಾಸ ಸತ್ಯಾಗ್ರಹ ಹೋರಾಟ ಹಮ್ಮಿಕೊಳ್ಳುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ.
ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಂಗಾಲ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ 35 ವರ್ಷಗಳಿಂದ ವಾಸವಿರುವ ಜನರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಈ ಭಾಗವನ್ನು ಶೀತ ಪ್ರದೇಶವೆಂದು ಘೋಷಣೆ ಮಾಡಿ ಪರ್ಯಾಯ ವ್ಯವಸ್ಥೆಯಾಗಿ ಜಾಗ ಗುರುತಿಸಲಾಗಿತ್ತು. ಆದರೆ ಇಲ್ಲಿನ ನಿವಾಸಿಗಳು ಜೆಡಿಎಸ್‍ಗೆ ಮತ ನೀಡುತ್ತಿದ್ದಾರೆ ಎನ್ನುವ ಕಾರಣಕ್ಕೆ ಇವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.
ಸುಮಾರು 25 ವರ್ಷಗಳಿಂದ ಗೆಲುವು ಸಾಧಿಸುತ್ತಲೇ ಬರುತ್ತಿರುವ ಬಿಜೆಪಿ ನೇತೃತ್ವದ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕಾರ್ಯವನ್ನು ಮಾಡುತ್ತಿಲ್ಲ. ಶಾಸಕರು ತಮ್ಮ ಜವಾಬ್ದಾರಿಯನ್ನು ಮರೆತು ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಟೀಕಿಸಿದರು.
ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಗ್ರಾಮಸ್ಥರಿಗೆ ಪರ್ಯಾಯ ವಸತಿ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಲ್ಲಾಡಳಿತ ಗುರುತಿಸಿರುವ ಐದು ಎಕರೆ ಜಾಗದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಗಣೇಶ್ ಒತ್ತಾಯಿಸಿದರು.
ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸದಿದ್ದಲ್ಲಿ ಮಡಿಕೇರಿಯ ಗಾಂಧಿ ಮಂಟಪದ ಬಳಿ ಜೆಡಿಎಸ್ ನೇತೃತ್ವದಲ್ಲಿ ಗ್ರಾಮಸ್ಥರೊಂದಿಗೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದರು.
ಈ ಸಂದರ್ಭ ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನಿಲ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್‍ಖಾನ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಶೀರ್ ಮತ್ತಿತರ ಪ್ರಮುಖರು ಹಾಜರಿದ್ದರು.