ಕೊಡಗಿನ ಅಭಿವೃದ್ಧಿ ಕಾರ್ಯಗಳತ್ತ ವಿಶೇಷ ಗಮನ ಹರಿಸಿ : ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಸೂಚನೆ

November 12, 2020

ಮಡಿಕೇರಿ ನ.12 : ಮಳೆಗಾಲ ಮುಗಿದಿದ್ದು, ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳತ್ತ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಕಾಮಗಾರಿಗಳ ಪ್ರಗತಿ, ಕೋವಿಡ್-19 ನಿರ್ವಹಣೆ, ಮತ್ತಿತರ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಏಪ್ರಿಲ್, ಮೇ ವರೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದ್ದು, ಈಗಿನಿಂದಲೇ ಅಭಿವೃದ್ಧಿ ಕಾರ್ಯದತ್ತ ವಿಶೇಷ ಆದ್ಯತೆ ನೀಡಬೇಕು. ಹಾಗೆಯೇ ಸರ್ಕಾರದ ಹಲವು ಯೋಜನೆಗಳನ್ನು ಅರ್ಹರಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
2019ರಲ್ಲಿ ಸಂಭವಿಸಿದ ಮಳೆಹಾನಿ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿ ನಿರ್ವಹಣೆ ಸಂಬಂಧ ಬಿಲ್ಲನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಅವರು ಸೂಚಿಸಿದರು.
2019 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅಂಗನವಾಡಿ, ಶಾಲಾ ಕಟ್ಟಡಗಳು, ಆಸ್ಪತ್ರೆ, ರಸ್ತೆ, ವಿದ್ಯುತ್ ಕಂಬ ಹೀಗೆ ಹಲವು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇವುಗಳು ಮೂಲ ಸೌಲಭ್ಯಗಳಲ್ಲಿ ಅತೀ ಮುಖ್ಯವಾಗಿವೆ ಎಂದು ಅವರು ತಿಳಿಸಿದರು.
ಮಳೆಹಾನಿ ಕಾಮಗಾರಿ ಸಂಬಂಧಿಸಿದಂತೆ ಜಿ.ಪಂ.ಸಿಇಒ ಅವರು ಮಾಹಿತಿ ತರಿಸಿಕೊಳ್ಳಬೇಕು. ಈ ಬಗ್ಗೆ ಪರಿಶೀಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಮಳೆ ಹಾನಿ ಸಂಬಂಧ ಎಂಜಿನಿಯರ್ ಅವರು ಅಂದಾಜು ಪಟ್ಟಿ ಸಲ್ಲಿಸಿ, ಜಿಲ್ಲಾಧಿಕಾರಿಯವರಿಂದ ಆಡಳಿತಾತ್ಮಕ ಅನುಮೋದನೆ ದೊರೆತಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸಬಹುದು, ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಅವರು ತಿಳಿಸಿದರು.
ಶಾಲಾ-ಕಾಲೇಜುಗಳು ಸರ್ಕಾರಿ ಕಚೇರಿಗಳು, ಜೊತೆಗೆ ಸರ್ಕಾರದ ಖಾಲಿ ಜಾಗದಲ್ಲಿ ಪಕ್ಷಿಗಳಿಗೆ ಅನುಕೂಲವಾಗುವ ಗಿಡಗಳನ್ನು ಅಭಿಯಾನ ಮಾದರಿಯಲ್ಲಿ ನೆಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು 2019 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಸ್ವಂತ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳುವವರಿಗೆ ಈಗಾಗಲೇ ಪ್ರಥಮ ಹಂತದಲ್ಲಿ ಒಂದು ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ. ಹಣ ಪಡೆದ ಶೇ.50ರಷ್ಟು ಮಂದಿ ಮನೆ ಕಾಮಗಾರಿ ಆರಂಭಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಗಮನಕ್ಕೆ ತಂದರು.
ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಮಳೆಯಿಂದ 4 ಜನರು ಮೃತಪಟ್ಟಿದ್ದು, ಇಬ್ಬರು ಕಾಣೆಯಾಗಿದ್ದಾರೆ. 17 ಜಾನುವಾರುಗಳು ಮಳೆಯಿಂದ ಮೃತಪಟ್ಟಿವೆ. ಮನೆ ಸಂಬಂಧಿಸಿದಂತೆ 291 ಭಾಗಶ: ಹಾನಿ, 43 ತೀವ್ರ ಹಾನಿ, 12 ಮನೆಗಳು ಸಂಪೂರ್ಣ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ಹೋಬಳಿವಾರು ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಈಗಾಗಲೇ 97 ರಷ್ಟು ಬೆಳೆ ಸಮೀಕ್ಷೆಯಾಗಿದೆ. ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿಯನ್ನು ಗ್ರಾಮ ಪಂಚಾಯತ್ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರದರ್ಶಿಸಲಾಗಿದ್ದು, ಈ ಕುರಿತು ರೈತರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ರೈತರು ಬೆಳೆ ಮಾಹಿತಿ, ವಿಸ್ತೀರ್ಣದ ಮಾಹಿತಿ ಕುರಿತು ಬೆಳೆ ದರ್ಶಕ್ ಮೊಬೈಲ್ ಆಪ್ ಮೂಲಕ ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ 10 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಅವರು ಮಾಹಿತಿ ನೀಡಿದರು.
ಮಳೆಹಾನಿ ಕಾಮಗಾರಿಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ಶ್ರೀಕಂಠಯ್ಯ ಅವರು ಮಾಹಿತಿ ನೀಡಿದರು. 2019 ರಲ್ಲಿ ಸಂಭವಿಸಿದ ಮಳೆ ಹಾನಿ ಕಾಮಗಾರಿ ಕೈಗೊಳ್ಳಲಾಗಿದ್ದು, ಬಿಲ್ಲು ಸಲ್ಲಿಸಬೇಕಿದೆ ಎಂದರು.
ಕೋವಿಡ್-19 ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಜಿಲ್ಲೆಯಲ್ಲಿ ಪ್ರತೀ ದಿನ ಕೋವಿಡ್ ಪರೀಕ್ಷೆ ಗುರಿ ಹೆಚ್ಚಿಸಲಾಗಿದ್ದು, ಪ್ರತೀ ದಿನ 500 ಆರ್‍ಟಿಪಿಸಿಆರ್ ಮತ್ತು 300 ಆರ್‍ಎಟಿ ಒಟ್ಟು 800 ಪರೀಕ್ಷೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಕೋವಿಡ್-19 ಪರೀಕ್ಷೆಯು ನಿರಂತರವಾಗಿದ್ದು, ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ಹೆಚ್ಚಿಸಬೇಕು. ಜಿಲ್ಲೆಯ ಜನರ ಸಹಕಾರದಿಂದ ಕೋವಿಡ್-19 ನ್ನು ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಮರ್ಥವಾಗಿ ನಿಭಾಯಿಸಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲಾಗುತ್ತಿದೆ. ಪ್ರತೀ ಗ್ರಾ.ಪಂ.ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಂಬಂಧಿಸಿದಂತೆ ಹೆಚ್ಚಿನ ಗಮನಹರಿಸಲಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್, ತಹಶೀಲ್ದಾರರಾದ ಗೋವಿಂದರಾಜು(ಸೋಮವಾರಪೇಟೆ), ಮಹೇಶ್(ಮಡಿಕೇರಿ), ನಂದೀಶ್(ವಿರಾಜಪೇಟೆ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ, ವಿರಾಜಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ನಾನಾ ಇಲಾಖೆ ಅಧಿಕಾರಿಗಳು ಹಲವು ಮಾಹಿತಿ ನೀಡಿದರು.

error: Content is protected !!