ಮಹಿಳೆಯರ ಸುರಕ್ಷತೆಗೆ ಸರ್ಕಾರದ ಆದ್ಯತೆ

12/11/2020

ಬೆಂಗಳೂರು ನ.12 : ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮಹಿಳೆಯರ ಕುರಿತು ಸಮಾಜದ ದೃಷ್ಟಿಕೋನ ಬದಲಾಗಬೇಕಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ವಿಧಾನಸೌಧದ ಮುಂಭಾಗ ದ್ವಿಚಕ್ರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಾನವ ಕಳ್ಳ ಸಾಗಾಣಿಕೆ ನಿಷೇದ ದಳಕ್ಕೆ ನಿರ್ಭಯ ಯೋಜನೆ ಯಡಿ 751 ದ್ವಿಚಕ್ರ ವಾಹನಗಳನ್ನು ನೀಡಲಾಗಿದೆ. ಮಹಿಳೆ ಯರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಯಾಗಿದೆ. ಯೋಜನೆ ಅಡಿಯಲ್ಲಿ ಏಳು ಕೋಟಿ ರೂ. ಅನುದಾನ ನೀಡಲಾಗಿದೆ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ನಮ್ಮ ಸರ್ಕಾರ ಆದ್ಯತೆಯಾಗಿದೆ. ರಾಜ್ಯದಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡಲು, ಸುರಕ್ಷತೆಗಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರು ಬಿಎಂಟಿಸಿ ಬಸ್ ನಲ್ಲಿ ಸುರಕ್ಷ ಕ್ರಮ, ಗಸ್ತು ವಾಹನ, ಲಿಂಗ ಸಂವೇದನೆ ತರಬೇತಿ ನೀಡಲಾಗಿದೆ. ಸೇಫ್ ಸಿಟಿ ಯೋಜನೆ ಅಡಿಯಲ್ಲಿ ನಗರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮಹಿಳಾ ಸುರಕ್ಷತೆ ಹಾಗೂ ಅವರ ರಕ್ಷಣೆ ನೀಡುವಲ್ಲಿ ಕರ್ನಾಟಕ ಇತರ ರಾಜ್ಯಗಳಿಗೆ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರಿಗೆ ಎಲ್ಲಾ ರೀತಿಯ ಭದ್ರತೆ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ಅವರು ತಿಳಿಸಿದರು.