ಹಾಸನ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಎಂಎಲ್ ಸಿ ವೀಣಾ ಅಚ್ಚಯ್ಯರಿಗೆ ಸನ್ಮಾನ

19/11/2020

ಮಡಿಕೇರಿ ನ. 19 : ಹಾಸನ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಲಾಯಿತು.

ಹಾಸನ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಮಹಿಳಾ ಕಾಂಗ್ರೆಸ್ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರ್‌ನಾಥ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಪಧಾದಿಕಾರಿಗಳು ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ವೀಣಾ ಅಚ್ಚಯ್ಯ ಅವರನ್ನು ಸನ್ಮಾನಿಸಿದರು.

ನಂತರ ಮಾತನಾಡಿದ ಡಾ.ಪುಷ್ಪ ಅಮರ್ ನಾಥ್ ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ವೀಣಾ ಅಚ್ಚಯ್ಯ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದು, ಅವರ ದಕ್ಷತೆ ಮತ್ತು ಪ್ರಾಮಾಣಿಕತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಮಾದರಿಯಾಗಿದೆ ಎಂದು ಹೇಳಿದರು. ದೇಶದ ಧೀಮಂತ ನಾಯಕಿ ಇಂದಿರಾ ಗಾಂಧಿಯವರ ಆದರ್ಶಗಳೊಂದಿಗೆ ನಡೆಯುತ್ತಿರುವ ವೀಣಾ ರವರ ಬದ್ದತೆಗಳು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರೇರಣೆಯಾಗಿದೆ ಎಂದು ಬಣ್ಣಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವೀಣಾ ಅಚ್ಚಯ್ಯ, ಪರಾವಲಂಬಿ ಆಗಿದ್ದ ದೇಶವನ್ನು ಸ್ವಾವಲಂಬಿ ದೇಶವನ್ನಾಗಿಸಿದ ಕೀರ್ತಿ ಇಂದಿರಾ ಗಾಂಧಿಯವರಿಗೆ ಸಲ್ಲುತ್ತದೆ .ಅವರ ಆದರ್ಶಗಳನ್ನು ಪ್ರತಿಯೊಬ್ಬ ಭಾರತೀಯ ನಾರಿಯರು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮುಖಂಡರುಗಳು, ಪಧಾದಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿದ್ದರು.