ಗೋಹತ್ಯೆ ನಿಷೇಧ ಕಾಯ್ದೆಗೆ ಬದ್ಧ

November 21, 2020

ಬೆಂಗಳೂರು ನ.21 : ರಾಜ್ಯದೆಲ್ಲೆಡೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಕೂಗುಗಳು ಕೇಳಿ ಬರುತ್ತಿರುವ ನಡುವಲ್ಲೇ, ಗೋಹತ್ಯೆ ನಿಷೇಧ ಮಾಡಲು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಶುಕ್ರವಾರ ಹೇಳಿದೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ. ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರೂ ಕೂಡ ಸಚಿವ ಪ್ರಭು ಚೌಹಾಣ್ ಜೊತೆಗೆ ಚರ್ಚೆ ನಡೆಸಿದ್ದಾರೆಂದು ತಿಳಿಸಿದೆ.
ಮತ್ತೊಂದು ಟ್ವೀಟ್ ನಲ್ಲಿ ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಬಿಜೆಪಿ ಸರ್ಕಾರ ಈಗಾಗಲೇ ಸಮಿತಿ ರಚಿಸಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ಮಸೂದೆ ಮಂಡಿಸಲಿದೆ. ರಾಜ್ಯದ ಜನತೆಯ ಅಪೇಕ್ಷೆ ಶೀಘ್ರದಲ್ಲೇ ನೆರವೇರಲಿದೆ ಎಂದು ಹೇಳಿದೆ.