ಎಸ್‍ಸಿ, ಎಸ್‍ಟಿ ಅನುದಾನ ಸಮರ್ಪಕವಾಗಿ ಬಳಸಿ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ

25/11/2020

ಮಡಿಕೇರಿ ನ.25 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಸದ್ಯದಲ್ಲೇ ಗ್ರಾ.ಪಂ.ಚುನಾವಣೆ ವೇಳಾಪಟ್ಟಿ ಪ್ರಕಟವಾಗುವುದರಿಂದ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದ್ದಾರೆ.
ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ನೀರಾವರಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಲೋಕೋಪಯೋಗಿ ಹೀಗೆ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಬಳಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಯಡಿ ಫಲಾನುಭವಿಗಳನ್ನು ಗುರುತಿಸುವಾಗ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಮಡಿಕೇರಿ ನಗರದಲ್ಲಿ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ತಲುಪಿಸುವ ಸಂಬಂಧ ಮಾಹಿತಿ ಪಡೆದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಅವರು ಎಸ್‍ಸಿಎಸ್‍ಪಿ/ಟಿಎಸ್‍ಪಿ ಸಂಬಂಧ ಮಾಹಿತಿ ನೀಡಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ, ಸಹಕಾರ ಇಲಾಖೆಯ ಉಪ ನಿಬಂಧಕರಾದ ಸಲೀಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಿಂಗರಾಜಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ರಾಜು, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಸೆಸ್ಕ್ ಎಇಇ ದೇವಯ್ಯ, ಕೈಮಗ್ಗ ಮತ್ತು ಜವುಳಿ ಇಲಾಖೆಯ ಸಹಾಯಕ ನಿರ್ದೇಕರಾದ ಗುರುಸ್ವಾಮಿ, ಕಾರ್ಮಿಕ ಇಲಾಖಾ ಅಧಿಕಾರಿ ಯತ್ನಟ್ಟಿ, ಪ್ರಾದೇಶಿಕ ಸಾರಿಗೆ ಇಲಾಖೆಯ ರೀಟಾ ಇತರರು ತಮ್ಮ ಇಲಾಖಾ ವ್ಯಾಪ್ತಿಯ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.