ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಯ ಪಾಠ ಬೇಕಿಲ್ಲ : ಕೊಡಗು ಕಾಂಗ್ರೆಸ್ ಅಸಮಾಧಾನ

05/12/2020

ಮಡಿಕೇರಿ ಡಿ.5 : (NEWS DESK) ಸುಮಾರು 130 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಯಿಂದ ಪಾಠ ಕಲಿಯುವ ಅನಿವಾರ್ಯತೆ ಇಲ್ಲವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್.ಟಾಟುಮೊಣ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಅನೇಕ ವರ್ಷಗಳಿಂದ ಪೊನ್ನಂಪೇಟೆ ಪ್ರತ್ಯೇಕ ತಾಲ್ಲೂಕು ಹೋರಾಟದಲ್ಲಿ ತೊಡಗಿಸಿಕೊಂಡು ನೂತನ ತಾಲ್ಲೂಕು ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಸೇರಿದಂತೆ ಹಲವು ಪ್ರಮುಖರ ಕಡೆಗಣನೆಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರೇ ನೇರ ಕಾರಣವೆಂದು ಆರೋಪಿಸಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿರುವ ಬೋಪಯ್ಯ ಅವರು ಪ್ರಬುದ್ಧತೆಯಿಂದ ನಡೆದುಕೊಳ್ಳದೆ ಕೇವಲ ರಾಜಕಾರಣವನ್ನಷ್ಟೇ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಕ್ಷೇತ್ರದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಜನರ ಬೇಡಿಕೆಗಳಿಗೆ ಸ್ಪಂದಿಸಬೇಕಾದ ಜವಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಕೀಳು ಮಟ್ಟದ ರಾಜಕೀಯ ಪ್ರದರ್ಶಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕೊಡಗಿನ ಹಿರಿಯ ಸಜ್ಜನ ರಾಜಕಾರಣಿ ಜೀವಿಜಯ ಅವರ ವಿರುದ್ಧ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ನೀಡಿರುವ ಹೇಳಿಕೆ ಹಾಸ್ಯಸ್ಪದವಾಗಿದೆ ಎಂದು ತಿಳಿಸಿರುವ ಅವರು, ಬಿ.ಎ.ಜೀವಿಜಯ ಎಲ್ಲಾ ವರ್ಗದ ಜನನಾಯಕರು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ಡಿ.9 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಜೀವಿಜಯ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಇವರನ್ನು ಆತ್ಮೀಯವಾಗಿ ಬರ ಮಾಡಿಕೊಳ್ಳಲಿದೆ. ಜೀವಿಜಯ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಬಲ ಮತ್ತಷ್ಟು ಹೆಚ್ಚಾಗಲಿದೆ. ಇದರಿಂದ ಹತಾಶಗೊಂಡಿರುವ ಕೆ.ಎಂ.ಗಣೇಶ್ ಅವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟಾಟುಮೊಣ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.