ಮಡಿಕೇರಿ ಖಾಸಗಿ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ : ಸೂಕ್ತ ಕ್ರಮಕ್ಕೆ ಕೊರವೇ ಆಗ್ರಹ

07/12/2020


ಮಡಿಕೇರಿ ಡಿ.7 : ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗಳಿಂದ ಪ್ರಯಾಣಿಕರು ಹಾಗೂ ಬಸ್ ಸಿಬ್ಬಂದಿಗಳು ತೊಂದರೆ ಅನುಭವಿಸುತ್ತಿದ್ದು, ನಗರಸಭೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಪವನ್ ಪೆಮ್ಮಯ್ಯ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸುಮಾರು 5.49 ಕೋಟಿ ರೂ.ಗಳಲ್ಲಿ ನಿರ್ಮಾಣಗೊಂಡಿರುವ ಬಸ್ ನಿಲ್ದಾಣದಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ. ಕಾಮಗಾರಿ ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಸ್ವಚ್ಛ ಭಾರತ್ ಅಭಿಯಾನ ಕೇವಲ ಘೋಷಣೆಗಳಿಗಷ್ಟೇ ಸೀಮಿತವಾಗಿದ್ದು, ಬಸ್ ನಿಲ್ದಾಣದ ಶೌಚಾಲಯ ನೀರಿನ ಕೊರತೆಯಿಂದ ಗಬ್ಬೆದ್ದು ನಾರುತ್ತಿದೆ. ಎಲ್ಲಾ ಪೈಪ್ ಗಳು ಮತ್ತು ವಿದ್ಯುತ್ ದೀಪಗಳು ಕಿಡಿಗೇಡಿಗಳ ಕುಚೇಷ್ಟೆಗೆ ಬಲಿಯಾಗಿವೆ. ಈ ಅವ್ಯವಸ್ಥೆಗಳು ಕಳೆದ ಅನೇಕ ತಿಂಗಳುಗಳಿಂದ ಬಸ್ ನಿಲ್ದಾಣವನ್ನು ಕಾಡುತ್ತಿದ್ದರೂ ನಗರಸಭೆ ಮಾತ್ರ ಜಾಣ ಕುರುಡಿಗೆ ಶರಣಾಗಿದೆ ಎಂದು ಟೀಕಿಸಿದ್ದಾರೆ.
ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದೆ ಇರುವುದರಿಂದ ಬಸ್ ಸಿಬ್ಬಂದಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ತಿಂಗಳುಗಳ ಹಿಂದೆ ರಕ್ಷಣಾ ವೇದಿಕೆ ಪ್ರತಿಭಟನೆ ಮಾಡಿ ಅವೈಜ್ಞಾನಿಕ ಕಾಮಗಾರಿ ಮತ್ತು ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿತ್ತು. ಆದರೆ ಇಲ್ಲಿಯವರೆಗೆ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಅತ್ತ ತಿರುಗಿಯೂ ನೋಡಿಲ್ಲ. ಬಸ್ ನಿಲ್ದಾಣ ಯೋಜನೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಂಶಯಗಳು ಮೂಡಿದೆ ಎಂದು ಆರೋಪಿಸಿರುವ ಪವನ್ ಪೆಮ್ಮಯ್ಯ, ಒಟ್ಟು ಕಾಮಗಾರಿಯನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ತಪ್ಪಿದ್ದಲ್ಲಿ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.