ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಯಲ್ಲಿ ಹೆಚ್ಚಿನ ನಿಗಾವಹಿಸಿ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ

ಮಡಿಕೇರಿ ಡಿ.10 : ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ರಾಜ್ಯದ ಉತ್ತರ ಭಾಗದ ಕೆಲವು ಜಿಲ್ಲೆಗಳಲ್ಲಿ ಗ್ರಾ.ಪಂ.ಸದಸ್ಯ ಸ್ಥಾನಗಳಿಗೆ ಹರಾಜು ಮೂಲಕ ಅಭ್ಯರ್ಥಿ ಆಯ್ಕೆ ಮಾಡುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿಯೂ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ವರದಿ ಮಾಡಬೇಕು. ಈ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಚುನಾವಣಾ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾ.ಪಂ.ಚುನಾವಣೆ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಮತ್ತು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಮತಗಟ್ಟೆಗಳ ಸಿದ್ಧತೆ ಮತ್ತು ದುರಸ್ತಿ ಪೂರ್ಣಗೊಂಡಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾವಹಿಸುವುದು, ಮತಗಟ್ಟೆ ಅಧಿಕಾರಿಗಳ ಪಟ್ಟಿ ಸಿದ್ದಪಡಿಸುವುದು ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಮತದಾರರ ಪಟ್ಟಿ ಮುದ್ರಿಸಿಕೊಡುವುದು, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಮತ್ತು ಮತ ಎಣಿಕೆ ಕೇಂದ್ರ ಗುರುತಿಸಿ ಜನದಟ್ಟಣೆ ಹೆಚ್ಚಾಗದಂತೆ ಕ್ರಮವಹಿಸುವುದು, ಕೋವಿಡ್-19 ಮಾರ್ಗಸೂಚಿ ಅನುಸರಿಸಬೇಕಿರುವುದರಿಂದ ಈ ಬಗ್ಗೆ ಎಚ್ಚರವಹಿಸುವುದು. ಭದ್ರತಾ ಕೊಠಡಿ ಸ್ಥಾಪಿಸುವುದು, ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೇವಾ ಮತದಾರರ ಮತ ಪತ್ರ ನೀಡುವುದು, ಈಗಾಗಲೇ ಸಂತೆ, ಜಾತ್ರೆ, ಮದ್ಯ ಮಾರಾಟ ನಿಷೇಧ ಸಂಬಂಧ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮೊದಲ ಹಂತದಲ್ಲಿ ನಡೆಯುವ ಮಡಿಕೇರಿ ಮತ್ತು ಸೋಮವಾರಪೇಟೆ ಮತಗಟ್ಟೆ ಅಧಿಕಾರಿಗಳಿಗೆ ಡಿಸೆಂಬರ್, 17 ಮತ್ತು ವಿರಾಜಪೇಟೆ ಮತಗಟ್ಟೆ ಅಧಿಕಾರಿಗಳಿಗೆ ಡಿಸೆಂಬರ್, 24 ರಂದು ತರಬೇತಿ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಅವರು ಹೆಳಿದರು.
ಮತ ಪೆಟ್ಟಿಗೆ ಮತ್ತು ಮತಗಟ್ಟೆ ಸಾಮಾಗ್ರಿಗಳನ್ನು ಮತಗಟ್ಟೆವಾರು ಸಿದ್ದಪಡಿಸಿಕೊಳ್ಳುವುದು, ಕಾಡಾನೆ ಹಾವಳಿ ಇರುವ ಕಡೆ ಮುನ್ನೆಚ್ಚರಿಕೆ ವಹಿಸುವುದು. ಜೊಒತೆಗೆ ಅಗತ್ಯ ವಾಹನ ಕಲ್ಪಿಸುವುದು ಮತ್ತಿತರ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಗ್ರಾ.ಪಂ.ಚುನಾವಣೆಯ ಮತದಾನ ಸಂಬಂಧ ಮೊದಲ ಹಂತದಲ್ಲಿ ನಡೆಯುವ ಚುನಾವಣೆಗೆ ಡಿಸೆಂಬರ್, 03 ರೊಳಗೆ ಮತ್ತು ಎರಡನೇ ಹಂತದಲ್ಲಿ ನಡೆಯುವ ಚುನಾವಣೆಗೆ ಡಿಸೆಂಬರ್, 08 ರೊಳಗೆ ನೋಂದಣಿ ಮಾಡಿರಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಪುನರ್ ಉಚ್ಛರಿಸಿದರು.
ಎಲ್ಲಾ ಮತಗಟ್ಟೆ ಕೇಂದ್ರಗಳಿಗೆ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ಪೂರೈಸುವುದು. ಜನದಟ್ಟಣೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ ಖಂಡು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿಲೇಶ್ ಸಿಂಧೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ, ತಹಶೀಲ್ದಾರ್ರಾದ ಗೋವಿಂದ ರಾಜು, ಮಹೇಶ್, ಯೋಗಾನಂದ, ಡಿವೈಎಸ್ಪಿಗಳಾದ ದಿನೇಶ್ ಕುಮಾರ್, ಶೈಲೇಂದ್ರ, ಡಿಎಚ್ಒ ಡಾ.ಕೆ.ಮೋಹನ್, ತಾಲ್ಲೂಕು ವೈದ್ಯಾಧಿಕಾರಿಗಳು, ಚುನಾವಣಾ ನೋಡಲ್ ಅಧಿಕಾರಿಗಳು ಇತರರು ಇದ್ದರು.



