ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಭೆ : ಅಶಕ್ತ ವ್ಯಕ್ತಿಗಳಿಗೆ ಕಾನೂನು ನೆರವು ನೀಡಿ : ನ್ಯಾಯಾಧೀಶ ಭೀಮರಾವ್ ಲಗಮಪ್ಪ ಕರೆ

ಮಡಿಕೇರಿ ಡಿ.18 : ಬಡವರು, ಮಾನಸಿಕ ರೋಗಿಗಳು ಹಾಗೂ ಅಶಕ್ತ ವ್ಯಕ್ತಿಗಳಿಗೆ ಕಾನೂನು ನೆರವು ನೀಡುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳ್ಕರ್ ಭೀಮರಾವ್ ಲಗಮಪ್ಪ ಅವರು ಕರೆ ನೀಡಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಮಾತನಾಡಿ ಬಡತನ ನಿರ್ಮೂಲನೆ, ಸಾಮಾಜಿಕ ಕಳಕಳಿ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು. ಇದನ್ನು ರಾಜ್ಯ ಉಚ್ಛ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕೊಡಗು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್, 19 ರಂದು ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿಯಿರುವ ರಾಜಿಯಾಗುವಂತಹ ಎಲ್ಲಾ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್ನ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕೋವಿಡ್-19 ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವುದು. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಜೊತೆಗೂಡಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುವುದು ಮತ್ತಿತರ ಬಗ್ಗೆ ಚರ್ಚೆ ನಡೆಯಿತು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಪಿ.ಎಸ್.ಚಂದ್ರಶೇಖರ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ್ ಅವರು ಹಲವು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ಬಿ.ಕೆ.ಮನು, ಅಪರ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಸ್ಮಿತಾ ನಾಗಲಾಪುರ, ಜಿಲ್ಲಾ ಸರ್ಕಾರಿ ವಕೀಲರಾದ ಸಿ.ಎಂ.ಕವೀಂದ್ರ, ಸಹಾಯಕ ನಿರ್ದೇಶಕರ ಅಭಿಯೋಜಕರಾದ ಸಂತೋಷ್ ಬಿ.ಎಸ್., ಅರೆಕಾಲಿಕ ಸ್ವಯಂ ಸೇವಕರಾದ ಜಾಯ್ಸ್ ಮೆನೇಜಸ್, ಫಾತಿಮಾ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಹಾಜರಿದ್ದರು.

