ಲಾಕ್‍ಡೌನ್ ಮಾಡುವ ಪರಿಸ್ಥಿತಿ ಇಲ್ಲ

22/12/2020

ಬೆಂಗಳೂರು ಡಿ.22 : ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್ ಡೌನ್ ಬಗ್ಗೆ ನಿರ್ಧಾರ ಇಲ್ಲ ಎಂದು ಹೇಳಿದರು. ವಿದೇಶದಿಂದ ಬಂದ ಎಲ್ಲರಿಗೂ ಐಸೋಲೇಶನ್ ಇಲ್ಲ. ಆದರೆ ಇಂಗ್ಲೆಂಡ್, ಡೆನ್ಮಾರ್ಕ್, ನೆದರ್ ಲ್ಯಾಂಡ್ಸ್ ನಲ್ಲಿ ರೂಪಾಂತರಗೊಂಡಿರುವ ಕೊರೊನಾ ವೈರಸ್ ಪತ್ತೆಯಾಗಿದೆ. ಹೊಸ ವಂಶವಾಹಿಯ ವೈರಾಣು ಕಾಣಿಸಿಕೊಂಡಿವೆ. ಈಗ ಇರುವ ವೈರಸ್‍ಗಿಂತಲೂ ಹೊಸ ವೈರಸ್ನಿಂದ ಸೋಂಕು ಹರಡುವ ಹರಡುವ ಪ್ರಮಾಣ ಹೆಚ್ಚಿತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡಿದೆ ಎಂದರು.
ರಾಜ್ಯಕ್ಕೆ 291 ಜನರು ಬ್ರಿಟಿಷ್ ಏರ್ ವೇಸ್ ನಿಂದ ಬಂದಿದ್ದರು. 246 ಜನರು ಏರ್ ಇಂಡಿಯಾದಿಂದ ಬಂದಿದ್ದರು. ಈ ಪೈಕಿ 138 ಜನರು ನೆಗೆಟಿವ್ ವರದಿ ತಂದಿಲ್ಲ. ಇಂತಹವರನ್ನು ಒಂದು ವಾರ ಕಾಲ ಮನೆಯಲ್ಲೇ ನಿಗಾ ಇರಿಸಲಾಗುತ್ತದೆ. ನಾಳೆಯಿಂದ ವಿಮಾನ ನಿಲ್ದಾಣಗಳಲ್ಲಿ ಕಿಯೋಸ್ಕ್ ಇಟ್ಟು, ಅಲ್ಲಿ ತಪಾಸಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಈ ವೈರಾಣು ಹರಡುವ ವೇಗ ಹೆಚ್ಚಿದೆ. ಆದರೆ ರೋಗ ತೀವ್ರವಾಗಿರುವುದಿಲ್ಲ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಿದೆ. ಹೊಸ ವರ್ಷದ ಅದ್ದೂರಿ ಆಚರಣೆಗಳನ್ನು ಕೈಬಿಡಬೇಕಿದೆ. ಕೆಲ ಹೋಟೆಲ್ ಗಳಲ್ಲಿ ಬುಕಿಂಗ್ ಮಾಡಿ ಆಚರಣೆ ಮಾಡಲು ಸಿದ್ಧತೆ ನಡೆಸಿರುವುದು ಕಂಡುಬಂದಿದೆ. ಹೀಗೆ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಾಗಿದ್ದು, ಹೊಸ ಬಗೆಯ ವೈರಾಣು ಬರುವ ಸಂದರ್ಭದಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದರು.
ಕಳೆದ 14 ದಿನಗಳಲ್ಲಿ ಬೇರೆ ದೇಶಗಳಿಂದ ರಾಜ್ಯಕ್ಕೆ ಬಂದವರು ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಹಾಗೂ ಬೇರೆ ದೇಶಗಳಿಂದ ಬಂದವರಿಗೂ 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಬೇಕು ಎಂದು ನಿರ್ಧರಿಸಲಾಗಿದೆ. ಯುಕೆಯಿಂದ ಬಂದವರನ್ನು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ ಎಂದು ತಿಳಿಸಿದರು.