ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ : ಮಡಿಕೇರಿಯಲ್ಲಿ ಎಸ್‍ಡಿಪಿಐ ಪ್ರತಿಭಟನೆ

December 24, 2020

ಮಡಿಕೇರಿ ಡಿ.24 : ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಹಾಗೂ ಇತರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಎಸ್‍ಡಿಪಿಐ ಪ್ರಮುಖರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಮನ್ಸೂರ್ ಆಲಿ ಮಾತನಾಡಿ, ಬೆಂಗಳೂರಿನ ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಸ್‍ಡಿಪಿಐನ ಬೆಂಗಳೂರಿನ ಜಿಲ್ಲಾಧ್ಯಕ್ಷ ಮೊಹಮ್ಮದ್ ಷರೀಪ್ ಅವರನ್ನು ಬಂಧಿಸಿರುವುದು ಖಂಡನೀಯ ಎಂದರು.
ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆಗಳ ಮೂಲಕ ಅಮಾಯಕರನ್ನು ಬಂಧಿಸಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ತಕ್ಷಣ ಮೊಹಮ್ಮದ್ ಷರೀಪ್‍ರನ್ನು ಬಿಡುಗಡೆಗೊಳಿಸಬೇಕು ಮತ್ತು ತನಿಖಾ ಸಂಸ್ಥೆಗಳಲ್ಲಿ ಹಸ್ತಕ್ಷೇಪ ಮಾಡಬಾರದೆಂದು ಮನ್ಸೂರ್ ಒತ್ತಾಯಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್ ಮಾತನಾಡಿ, ದೇಶದ ಸಮಗ್ರತೆ ಮತ್ತು ಭದ್ರತೆಗಾಗಿ ಕಾರ್ಯನಿರ್ವಹಿಸುತ್ತಿರುವ ಎನ್‍ಐಎ ಸಂಸ್ಥೆಯನ್ನು ಕೇಂದ್ರ ಸರ್ಕಾರ ತನಗಿಷ್ಟ ಬಂದಂತೆ ಬಳಸಿಕೊಳ್ಳುತ್ತಿದೆ. ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುತ್ತಿರುವವರನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಪಕ್ಷದ ಜಿಲ್ಲಾ ಸಮಿತಿ ಸದಸ್ಯರುಗಳಾದ ಬಶೀರ್, ಮುಸ್ತಫ, ನಗರ ಸಮಿತಿ ಸದಸ್ಯ ಮೈಕಲ್ ವೇಗಸ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!