1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್

26/12/2020

ಬೆಂಗಳೂರು ಡಿ.26 : ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜು ಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಡಿಜಿಟಲ್ ಕಲಿಕೆಯನ್ನು ವ್ಯಾಪಕವಾಗಿ ಉತ್ತೇಜಿಸುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಉತ್ತಮ ಆಡಳಿತ ದಿನ(ಗುಡ್ ಗವರ್ನೆನ್ಸ್ ಡೇ)ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ಉನ್ನತ ಶಿಕ್ಷಣದಲ್ಲಿ ಜಾಗತಿಕ ಮಟ್ಟದ ಸಿದ್ಧತೆ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಮಾಹಿತಿ ನೀಡಿದರು.