ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಹಠಾತ್ ನಿಧನ : ರಾಜಕೀಯ ನಾಯಕರ ಸಂತಾಪ

29/12/2020

ಬೆಂಗಳೂರು ಡಿ.29 : ವಿಧಾನಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ(65) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಅವರು ಡೆತ್‌ನೋಟ್‌ನಲ್ಲೂ ಈ ವಿಚಾರ ಉಲ್ಲೇಖಿಸಿದ್ದಾರೆ. ಸಜ್ಜನ ರಾಜಕಾರಣಿಯ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬಿ. ಎಸ್. ಯಡಿಯೂರಪ್ಪ ‘ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.