ಗ್ರಾ.ಪಂ. ಚುನಾವಣೆ ಮತ ಎಣಿಕೆ : ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಮಡಿಕೇರಿ ಡಿ.29 : ಗ್ರಾಮ ಪಂಚಾಯತ್ ಚುನಾವಣೆ 2020ರ ಸಂಬಂಧ ಮತ ಎಣಿಕೆ ನಡೆಯುವ ದಿನದಂದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144 ಮತ್ತು 144(ಎ)ರಡಿ ದತ್ತವಾದ ಅಧಿಕಾರದಂತೆ ಡಿಸೆಂಬರ್, 30 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ಕೇಂದ್ರಗಳಾದ ಮಡಿಕೇರಿಯ ಸಂತ ಜೋಸೆಫರ ಶಾಲೆ, ವಿರಾಜಪೇಟೆಯ ಸೈಂಟ್ ಆನ್ಸ್ ಕಾನ್ವೆಂಟ್, ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಆವರಣದೊಳಗೆ ಸಂಬಂಧಪಡದ/ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಿದೆ.
ಮತ ಎಣಿಕೆ ನಡೆಯುವ ಕೇಂದ್ರಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸರ್ಕಾರದ ಕೋವಿಡ್-19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
