ಮಳೆ ಹಾನಿ ಕಾಮಗಾರಿ : ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲು ಡಿಸಿ ಸೂಚನೆ

January 2, 2021

ಮಡಿಕೇರಿ ಜ.2 : ಕಳೆದ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಕಾಮಗಾರಿ ಕೈಗೊಳ್ಳಲು ಸರ್ಕಾರದಿಂದ 46 ಕೋಟಿ ರೂ. ಬಿಡುಗಡೆಯಾಗಿದ್ದು, ಈ ಸಂಬಂಧ ಕ್ರಿಯಾಯೋಜನೆಗೆ ಅನುಮೋದನೆ ಪಡೆದು ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಳೆಹಾನಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ಮಾರ್ಗಸೂಚಿ ಪಾಲಿಸಬೇಕು. ಮಳೆ ಹಾನಿ ಕಾಮಗಾರಿ ಸಂಬಂಧ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.25 ರಷ್ಟು ಹಣ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಆರಂಭಿಸಬೇಕು. ಜೊತೆಗೆ ಬಾಕಿ ಹಣ ಬಿಡುಗಡೆ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
2018 ಮತ್ತು 2019 ರಲ್ಲಿ ಸಂಭವಿಸಿದ ಮಳೆಹಾನಿ ಕಾಮಗಾರಿಗಳಿಗೆ ಇದುವರೆಗೆ ‘ಹಣ ಬಳಕೆ ಪ್ರಮಾಣ ಪತ್ರ’ ಸಲ್ಲಿಸದಿರುವುದಕ್ಕೆ ಜಿಲ್ಲಾಧಿಕಾರಿ ಅವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ, ಪಿಎಂಜಿಎಸ್‍ವೈ, ಗ್ರಾಮೀಣ ಕುಡಿಯುವ ನೀರು ವಿಭಾಗ ಹೀಗೆ ಹಲವು ಎಂಜಿನಿಯರ್ ವಿಭಾಗಕ್ಕೆ ಹಣ ಬಿಡುಗಡೆ ಮಾಡಲಾಗಿದೆ. 2018 ಮತ್ತು 19 ರಲ್ಲಿ ಸಂಭವಿಸಿದ ಮಳೆಹಾನಿ ಕಾಮಗಾರಿಗಳಿಗೆ ಬಿಡುಗಡೆಯಾದ ಹಣದ ಬಗ್ಗೆ ಸೋಮವಾರ ಸಂಜೆಯೊಳಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಂಚಾಯತ್ ರಾಜ್ ಎಂಜನಿಯರಿಂಗ್ ವಿಭಾಗಕ್ಕೆ ವಿಶೇಷ ಅನುದಾನದಡಿ 28 ಕೋಟಿ ರೂ. ಅನುದಾನ ನೀಡಲಾಗಿದೆ. ಆದರೆ ಇದುವರೆಗೆ ಹಣ ಬಳಕೆ ಪ್ರಮಾಣ ಪತ್ರ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಅವರು ಅಸಮಾದಾನ ವ್ಯಕ್ತಪಡಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೂ ಹಣ ಬಿಡುಗಡೆಯಾಗಿದ್ದು, ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸುವಂತೆ ತಿಳಿಸಿದರು. ಹಳೇ ಕಾಮಗಾರಿಗಳಿಗೆ ಹಣ ಬಳಕೆ ಪತ್ರ ಸಲ್ಲಿಸಬೇಕು. ಪ್ರತೀ ವಾರ ಮಳೆಹಾನಿ ಕಾಮಗಾರಿ ಸಂಬಂಧ ಅಪ್‍ಡೇಟ್ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಕೋವಿಡ್-19 ಸಂಬಂಧ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್‍ಗಳನ್ನಾಗಿ ಮಾಡಲಾಗಿತ್ತು, ಈಗ ಶಾಲೆಗಳು ಆರಂಭವಾಗಿರುವುದರಿಂದ ಬಿಟ್ಟುಕೊಡಬೇಕಿದೆ. ಆ ನಿಟ್ಟಿನಲ್ಲಿ ಶಾಲೆಗಳನ್ನು ಸ್ಯಾನಿಟೈಸರ್ ಮಾಡಿ ಬಿಟ್ಟುಕೊಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು. ಮುಜರಾಯಿ ಇಲಾಖೆ ವ್ಯಾಪ್ತಿಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರು ಮಳೆ ಹಾನಿ ಕಾಮಗಾರಿ ಸಂಬಂಧ ಮಾಹಿತಿ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಕಾರ್ಯಪ್ಪ, ಡಿಎಚ್‍ಒ ಡಾ.ಕೆ.ಮೋಹನ್, ಡಾ.ರೂಪೇಶ್, ಡಾ.ಆನಂದ್, ಡಿಯುಡಿಸಿ ಯೋಜನಾ ನಿರ್ದೇಶಕರಾದ ರಾಜು, ಪಿಆರ್‍ಇಡಿ ಎಂಜಿನಿಯರ್ ಶ್ರೀಕಂಠಯ್ಯ, ಪಿಡಬ್ಲ್ಯುಡಿ ಎಂಜಿನಿಯರ್ ವೇಣುಗೋಪಾಲ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಡಿಡಿಪಿಐ ಪಿ.ಎಸ್.ಮಚ್ಚಾಡೋ, ಪಶುಪಾಲನಾ ಇಲಾಖೆ ಡಿಡಿ ಸುರೇಶ್ ಭಟ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಬಿಸಿಎಂ ಅಧಿಕಾರಿ ನಿಂಗರಾಜು, ತಹಶೀಲ್ದಾರ್ ಗೋವಿಂದರಾಜು, ಮಹೇಶ್, ಯೋಗಾನಂದ, ಪ.ಪಂ.ಇಒಗಳಾದ ಶ್ರೀಧರ, ನಾಚಪ್ಪ, ಡಿಯುಡಿಸಿ ಎಇಇ ನಟರಾಜು, ಮಹೇಂದ್ರ ಕುಮಾರ್ ಇತರರು ಹಾಜರಿದ್ದರು.

error: Content is protected !!