ಕೊಡಗಿನಲ್ಲಿ ಜ.8 ರಂದು ಕೋವಿಡ್ ಲಸಿಕೆಯ ಪೂರ್ವಭ್ಯಾಸ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ

06/01/2021


ಮಡಿಕೇರಿ ಜ. 6 : ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಪೂರ್ವಭ್ಯಾಸವು (ಡ್ರೈ ರನ್) ಜನವರಿ 8 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಲಸಿಕೆಯ ಪೂರ್ವಭ್ಯಾಸ ಸಂಬಂಧ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯ ಮಾಹಿತಿ ನೀಡುವುದು. ಹಾಗೆಯೇ ತಾಲ್ಲೂಕು ಮಟ್ಟದಲ್ಲಿ ನಡೆಯುವ ಕೋವಿಡ್ ಲಸಿಕೆಯ ಪೂರ್ವಭ್ಯಾಸ ಸಂಬಂಧ ತಹಶೀಲ್ದಾರರ ಜೊತೆ ಸಮನ್ವಯತೆ ಸಾಧಿಸಿ ಲಸಿಕೆ ತಾಲೀಮು ಯಶಸ್ವಿಗೊಳಿಸಲು ಕ್ರಮ ಕೈಗೊಳ್ಳುವಂತೆ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.
ಕೋವಿಡ್ ಲಸಿಕೆಯ ಪೂರ್ವಭ್ಯಾಸ ಸಂಬಂಧ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ನೀಡಬಾರದು. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ನಗರದ ಜಿಲ್ಲಾ ಆಸ್ಪತ್ರೆ, ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರ ಮತ್ತು ವಿರಾಜಪೇಟೆ ತಾಲ್ಲೂಕಿನ ಕಾಕೋಟುಪರಂಬು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯ ಡ್ರೈ ರನ್ ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಗೋಪಿನಾಥ್, ಡಾ.ಮಹೇಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಸುಧೀರ್ ನಾಯಕ್ ಇತರರು ಇದ್ದರು.