ಹಕ್ಕಿ ಜ್ವರ ಭೀತಿ : ಕೊಡಗಿನ ಗಡಿ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ

06/01/2021

ಮಡಿಕೇರಿ ಜ.6 : ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ದೃಢಪಟ್ಟಿದ್ದು, ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಕೊಡಗು ಜಿಲ್ಲೆಯನ್ನು ಸಂಪರ್ಕಿಸುವ 3 ಚೆಕ್ ಪೋಸ್ಟ್‍ಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಈಗಾಗಲೇ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ತಹಶೀಲ್ದಾರ್‍ಗಳು, ಅರಣ್ಯ ಇಲಾಖೆ ಹಾಗೂ ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಕೇರಳ ಸಂಪರ್ಕಿಸುವ ಕುಟ್ಟ, ಮಾಕುಟ್ಟ ಮತ್ತು ಕರಿಕೆ ಚೆಕ್ ಪೋಸ್ಟ್‍ಗಳಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಅವರೊಂದಿಗೆ ಪಶು ವೈದ್ಯಕೀಯ ಇಲಾಖೆ ಸಿಬ್ಬಂದಿಗಳನ್ನು ಕೂಡ ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕೇರಳದ ಮೂಲಕ ಕೊಡಗು ಜಿಲ್ಲೆಗೆ ಕೋಳಿ ಮತ್ತು ಪಶು ಆಹಾರದಂತಹ ಯಾವುದೇ ವಸ್ತುಗಳ ಸರಬರಾಜು ಆಗದಿರುವ ಬಗ್ಗೆ ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಆದರೆ ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಂದ ಕೇರಳಕ್ಕೆ ಸರಕು ಸರಂಜಾಮುಗಳ ಪೂರೈಕೆಯಾಗುತ್ತಿದ್ದು ಸದ್ಯಕ್ಕೆ ಇದಕ್ಕೆ ಯಾವುದೇ ಅಡೆತಡೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಕೇರಳದಿಂದ ಮರಳುವ ಸರಕು ವಾಹನಗಳನ್ನು ಗಡಿಗಳಲ್ಲೇ ಸ್ಯಾನಿಟೈಸರ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಅರಣ್ಯ ವ್ಯಾಪ್ತಿಯಲ್ಲಿ ಕಾಡು ಹಕ್ಕಿಗಳು ಮತ್ತು ವಲಸೆ ಪಕ್ಷಿಗಳು ಮತ್ತು ಸ್ಥಳೀಯ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪಕ್ಷಿಗಳು ಸಕಾರಣವಿಲ್ಲದೇ ಸತ್ತಿರುವುದು ಕಂಡು ಬಂದರೆ ತಕ್ಷಣವೇ ಸ್ಥಳೀಯ ಪಶು ವೈದ್ಯಕೀಯ ಇಲಾಖೆಗೆ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ಮತ್ತು ಪಂಚಾಯಿತಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಹಕ್ಕಿ ಜ್ವರದಂತಹ ಯಾವುದೇ ಪ್ರಕರಣ ಕಂಡು ಬಂದಿಲ್ಲ. ಆದರೂ ಕೂಡ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅದರ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆಗೂ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.