ಕೊಡವ ಹೆರಿಟೇಜ್ ಸೆಂಟರ್ ಕರ್ಮಕಾಂಡ : ಅಧಿಕಾರಿಗಳು ಅಮಾನತು, ಗುತ್ತಿಗೆದಾರ ಕಪ್ಪು ಪಟ್ಟಿಗೆ
January 8, 2021

ಮಡಿಕೇರಿ ಜ.8 : ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕೊಡವ ಹೆರಿಟೇಜ್ ಸೆಂಟರ್ ಯೋಜನೆಯ ಕರ್ಮಕಾಂಡದ ಕುರಿತು ಸುದೀರ್ಘ ಚರ್ಚೆ ನಡೆಸಿ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಸಂಬಂಧಿಸಿದ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆಗದೆ ಇರುವ ಕಾಮಗಾರಿಗೆ ಬಿಲ್ ಪಾಸ್ ಮಾಡಿರುವುದು ಸಾಬೀತಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಗುತ್ತಿಗೆದಾರ ಹೇಮಂತ್ ಎಂಬುವವರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದರು. ಕೆಡಿಪಿ ಸಭೆಯಲ್ಲಿ ಚರ್ಚಿಸಿ ಇಂಜಿನಿಯರ್ ಪುರುಷೋತ್ತಮ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಆರಂಭದ ಯೋಜನೆಯಂತೆ 1.75 ಕೋಟಿ ರೂ.ವೆಚ್ಚದಲ್ಲಿ ಪೂರ್ಣಗೊಳ್ಳಬೇಕಾಗಿದ್ದ ಯೋಜನೆಯ ಮೊತ್ತ ಇದೀಗ 2.68 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

