ನೂತನ ಸಂಸತ್ ಭವನ ನಿರ್ಮಾಣಕ್ಕೆ ಪಾರಂಪರಿಕ ಸಂರಕ್ಷಣಾ ಸಮಿತಿ ಅಸ್ತು

ನವದೆಹಲಿ ಜ. 12 : ನೂತನ ಸಂಸತ್ ಭವನ ನಿರ್ಮಾಣಕ್ಕೆ ಪಾರಂಪರಿಕ ಸಂರಕ್ಷಣಾ ಸಮಿತಿ ಸೋಮವಾರ ಅನುಮೋದನೆ ನೀಡಿದೆ.
ನೂತನ ಸಂಸತ್ ಭವನ ನಿರ್ಮಾಣಕ್ಕೆ ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಪಡೆಯುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ ಹಿನ್ನಲೆಯಲ್ಲಿ ಕೇಂದ್ರ ಸಮಿತಿಯ ಅನುಮತಿ ಕೇಳಿತ್ತು.
ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಪಾರಂಪರಿಕ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿರುವ ಕೇಂದ್ರ ವಸತಿ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರು, ನೂತನ ಸಂಸತ್ ಭವನ ನಿರ್ಮಾಣ ಸಂಬಂಧ ಸರ್ಕಾರದ ಪ್ರಸ್ತಾಪದ ಬಗ್ಗೆ ಸಮಿತಿ ಚರ್ಚಿಸಿ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ನೂತನ ಸಂಸತ್ ಭವನ ನಿರ್ಮಾಣದ ಸೆಂಟ್ರಲ್ ವಿಸ್ಟಾ ಯೋಜನೆಗೆ ಕೇಂದ್ರ ಸರ್ಕಾರ ನೀಡಿದ್ದ ಅಧಿಸೂಚನೆ ಮತ್ತು ಪರಿಸರ ಇಲಾಖೆಯ ಅನುಮತಿಯನ್ನು ಸುಪ್ರೀಂ ಕೊರ್ಟ್ ಎತ್ತಿ ಹಿಡಿದಿತ್ತು.
2019ರ ಸೆಪ್ಟೆಂಬರ್ನಲ್ಲಿ ಘೋಷಿಸಲಾದ ಪರಿಷ್ಕೃತ ಸೆಂಟ್ರಲ್ ವಿಸ್ಟಾ ಯೋಜನೆಯಲ್ಲಿ ಸುಮಾರು 1,200 ಆಸನದ ಸಾಮರ್ಥ್ಯವುಳ್ಳ ತ್ರಿಕೋನಾಕಾರದ ಹೊಸ ಸಂಸತ್ ಭವನ ನಿರ್ಮಾಣ ಮಾಡಲಾಗುತ್ತದೆ. 2022ರ ಆಗಸ್ಟ್ ವೇಳೆಗೆ ಈ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
