ಜ.20 ರಂದು ರೈತರಿಗಾಗಿ ರಾಜಭವನ ಮುತ್ತಿಗೆ : ನಾಪಂಡ ಮುತ್ತಪ್ಪ

January 18, 2021

ಮಡಿಕೇರಿ ಜ.18 : ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಜ.20 ರಂದು ಕಾಂಗ್ರೆಸ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆ ಹೋರಾಟ ನಡೆಯಲಿದೆ ಎಂದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆ ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆಯನ್ನು ಪ್ರತಿಭಟನೆಯ ಸಂದರ್ಭ ವಿರೋಧಿಸಲಾಗುವುದೆಂದರು.
ಕಳೆದ 44 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಮಾತ್ರ ಮಾತುಕತೆಯ ನಾಟಕವನ್ನಷ್ಟೇ ಆಡುತ್ತಿದೆ ಎಂದು ಅವರು ಆರೋಪಿಸಿದರು.
ಕೃಷಿ ತಿದ್ದುಪಡಿ ಕಾಯ್ದೆಯಿಂದ ಕೃಷಿ ಭೂಮಿ ಬಂಡವಾಳಶಾಹಿಗಳ ಪಾಲಾಗುತ್ತಿದ್ದು, ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೆ ಅದೇ ಭೂಮಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರದ ನಿರ್ಧಾರದಿಂದಾಗಿ ಮುಂದಿನ ದಿನಗಳಲ್ಲಿ ರೈತರಿಗೆ ಬೆಂಬಲ ಬೆಲೆ ಮತ್ತು ಸಬ್ಸಿಡಿ ಸಿಗದ ಪರಿಸ್ಥಿತಿ ನಿರ್ಮಾಣವಾಗಬಹುದು. ಅಕ್ಕಿಯ ಬೆಲೆ ಕೆ.ಜಿ ಗೆ ನೂರು ರೂ. ದಾಟಬಹುದು. ಅಲ್ಲದೆ ಪಡಿತರ ವ್ಯವಸ್ಥೆಯೂ ಇಲ್ಲದಂತಾಗಬಹುದು ಎಂದು ಮುತ್ತಪ್ಪ ಆತಂಕ ವ್ಯಕ್ತಪಡಿಸಿದರು.

error: Content is protected !!