ಆನ್ಲೈನ್ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಎಚ್ಚರದಿಂದಿರಲು ಕೊಡಗು ಪೊಲೀಸರ ಮನವಿ

ಮಡಿಕೇರಿ ಜ.20 : ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆಗಳು ಆನ್ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿವೆ. ಆದರೆ ಈ ವ್ಯವಸ್ಥೆಯನ್ನೇ ದುರ್ಬಳಕೆ ಮಾಡಿಕೊಂಡ ಕಿಡಿಗೇಡಿಗಳು ಕೆಲವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳು ಆನ್ಲೈನ್ ತರಗತಿಗಳಿಗಾಗಿ ಮೊಬೈಲ್ನ್ನು ಹೆಚ್ಚಾಗಿ ಬಳಸುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ದುಷ್ಕರ್ಮಿಗಳು ಮೊಬೈಲ್ ಸಂಖ್ಯೆಯನ್ನು ಪಡೆದು ಅಪ್ರಾಪ್ತ ವಿದ್ಯಾರ್ಥಿನಿಗಳೊಂದಿಗೆ ಸ್ನೇಹ ಬೆಳೆಸಿದ್ದಾರೆ. ಅಲ್ಲದೆ ನಂಬಿಕಸ್ಥರಂತೆ ವರ್ತಿಸಿ ವಿದ್ಯಾರ್ಥಿನಿಯರ ಫೋಟೋಗಳನ್ನು ವಿವಿಧ ಭಂಗಿಗಳಲ್ಲಿ ವಿನಿಮಯ ಮಾಡಿಸಿಕೊಂಡಿದ್ದಾರೆ. ನಂತರ ಬ್ಲಾಕ್ಮೇಲ್ ಮತ್ತು ಬೆದರಿಕೆ ತಂತ್ರ ಬಳಸಿ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ. ಒಪ್ಪದೇ ಇದ್ದ ವಿದ್ಯಾರ್ಥಿನಿಯರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು, ಆತಂಕದ ಬೆಳವಣಿಗೆಗೆ ಕಾರಣವಾಗಿದೆ.
ಅಪ್ರಾಪ್ತ ವಿದ್ಯಾರ್ಥಿನಿಯರ ಭವಿಷ್ಯಕ್ಕೆ ಸಂಚಕಾರವಾಗಿದ್ದ ಈ ಅಪರಾಧ ಪ್ರಕರಣದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ ಕೊಡಗು ಮಹಿಳಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
::: ಎಚ್ಚರದಿಂದಿರಿ :::
ಶಾಲಾ, ಕಾಲೇಜು ವಿದ್ಯಾರ್ಥಿಗಳು, ಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು, ಪೋಷಕರು ಹಾಗೂ ಸಾರ್ವಜನಿಕರು ಈ ಬೆಳವಣಿಗೆಯ ಬಗ್ಗೆ ಎಚ್ಚೆತ್ತುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
::: 5 ವರ್ಷ ಜೈಲು ಶಿಕ್ಷೆ :::
ಈ ರೀತಿಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಡಿಯಲ್ಲಿ 67(ಎ), 67(2) ಐಟಿ ಸೆಕ್ಷನ್ನಡಿಯಲ್ಲಿ ಮೊದಲ ಬಾರಿಗೆ 5 ವರ್ಷ ಸೆರೆವಾಸ ಮತ್ತು 10 ಲಕ್ಷ ರೂ. ದಂಡ, 2 ನೇ ಬಾರಿಗೆ ಮತ್ತು ನಂತರದಲ್ಲಿ 7 ವರ್ಷಗಳ ವರೆಗಿನ ಸೆರೆವಾಸ 10 ಲಕ್ಷ ರೂ. ದಂಡದ ಶಿಕ್ಷೆ ವಿಧಿಸಲಾಗುತ್ತದೆ.
ಪ್ರಕರಣ ಗಂಭೀರವಾಗಿರುವುದರಿಂದ ಪ್ರತಿಯೊಬ್ಬ ಪೆÇೀಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಗಮನಹರಿಸುವುದು ಸೂಕ್ತವೆಂದು ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಮಕ್ಕಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದು ಕಂಡು ಬಂದರೆ ತಕ್ಷಣ ಅಕ್ಕಪಕ್ಕದ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬಹುದು, ಅಲ್ಲದೆ 1098 ಸಂಖ್ಯೆಗೆ ಕರೆ ಮಾಡಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ.