ಜ.31 ರಂದು ಅಪ್ರುರವೀಂದ್ರ ಬಿಜೆಪಿಗೆ ಸೇರ್ಪಡೆ : ಅರೆಕಾಡಿನಲ್ಲಿ ಸಮಾವೇಶ

January 29, 2021

ಮಡಿಕೇರಿ ಜ.29 : ಮಡಿಕೇರಿ ತಾಲ್ಲೂಕು ಪಂಚಾಯಿತಿ ಸದಸ್ಯ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರುರವೀಂದ್ರ ಅವರು ಜ.31 ರಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ಅವರು ಅರೆಕಾಡು ಗ್ರಾಮದಲ್ಲಿ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಗೆ ಸೇರಲಿದ್ದಾರೆ.
ಹೊಸ್ಕೇರಿ ಗ್ರಾ.ಪಂ ವ್ಯಾಪ್ತಿಯ ಅರೆಕಾಡು ಗ್ರಾಮದ ಬಿಜೆಪಿ ಕಾರ್ಯಕರ್ತರ ಸಮಾವೇಶ ಭಾನುವಾರ ಅರೆಕಾಡು ಯುವಕ ಸಂಘದ ಮೈದಾನದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 10.30 ಗಂಟೆಗೆ ಬಿಜೆಪಿ ಕೊಡಗು ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ಮಂಡಲ ಅಧ್ಯಕ್ಷ ಕಾಂಗೀರ ಸತೀಶ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್‍ಸಿಂಹ, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಸಮತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಶರಿನ್ ಸುಬ್ಬಯ್ಯ, ಮಡಿಕೇರಿ ತಾ.ಪಂ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿ.ಪಂ ಸದಸ್ಯರಾದ ಕಲಾವತಿ ಪೂವಪ್ಪ, ಹೊಸ್ಕೇರಿ ಬಿಜೆಪಿ ಪ್ರಮುಖ ಬಾಪೂಜಿ ಉದಯಕುಮಾರ್ ಉಪಸ್ಥಿತರಿರುವರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಮನುಮುತ್ತಪ್ಪ ಅವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ ತಾವು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ಅಪ್ರು ರವೀಂದ್ರ ತಿಳಿಸಿದ್ದಾರೆ.

error: Content is protected !!