ಪತ್ರಕರ್ತರ ಗ್ರಾಮ ವಾಸ್ತವ್ಯ ರಾಜ್ಯದೆಲ್ಲೆಡೆ ನಡೆಯಲಿ: ಸಚಿವ ಕೆ.ಎಸ್. ಈಶ್ವರಪ್ಪ ಆಶಯ

01/02/2021

ಕಡಬ (ದ.ಕ.ಜಿಲ್ಲೆ): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದ್ದು, ಇಂತಹಾ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯುವಂತಾಗಲಿ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರ ಈ ಕಾರ್ಯಕ್ರಮ ನನ್ನ ಕಣ್ಣು ತೆರೆಸಿದೆ. ಇದರಿಂದ ಗ್ರಾಮಗಳ ಸಮಸ್ಯೆಗಳು ಬಗೆ ಹರಿಯಲಿದೆ. ಇಲಾಖೆ ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಲು ಕಾರಣವಾಗುತ್ತದೆ ಎಂದು ಅವರು ಹೇಳಿದರು.