ಕೃಷಿ ಮಸೂದೆಗೆ ವಿರೋಧ : ಫೆ.8ರಂದು ಸೋಮವಾರಪೇಟೆಯಲ್ಲಿ ಪ್ರತಿಭಟನೆ

February 6, 2021

ಸೋಮವಾರಪೇಟೆ ಫೆ.6 : ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಕೃಷಿ ಮಸೂದೆಗಳನ್ನು ವಾಪಾಸ್ಸು ಪಡೆಯಬೇಕು ಹಾಗೂ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಫೆ.8ರಂದು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎಂ.ಲೋಕೇಶ್ ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ. ಮಾಜಿ ಸಚಿವ ಬಿ.ಎ.ಜೀವಿಜಯ, ಕೆಪಿಸಿಸಿ ಸದಸ್ಯೆ ಕೆ.ಪಿ.ಚಂದ್ರಕಲಾ, ಐಎನ್‍ಟಿಯುಸಿಯ ರಾಜ್ಯ ಉಪಾಧ್ಯಕ್ಷ ಎನ್.ಎಂ.ಮುತ್ತಪ್ಪ ಹಾಗೂ ಪಕ್ಷದ ಹಿರಿಯರ ನೇತೃತ್ವದಲ್ಲಿ ಕಕ್ಕೆಹೊಳೆ ಸಮೀಪವಿರುವ ಪಕ್ಷದ ಕಚೇರಿಯಿಂದ ಬೆಳಿಗ್ಗೆ 10.30ಕ್ಕೆ ಮೆರವಣಿಯಲ್ಲಿ ತೆರಳಿ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ನಂತರ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರೈತರ ಮರಣಶಾಸನಗಳು ಎಂದು ಕರೆಯಲಾಗಿರುವ ರೈತ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಕಾರ್ಪೋರೇಟ್ ಕಂಪನಿಗಳಿಗೆ ಕೃಷಿ ವಲಯವನ್ನು ಮಾರಾಟ ಮಾಡುವ ಕುತಂತ್ರವನ್ನು ಕೇಂದ್ರ ಸರಕಾರ ಮಾಡುತ್ತಿದೆ. ಕಳೆದ ಎರಡು ತಿಂಗಳಿನಿಂದ ದೇಶದ ಅನ್ನದಾತರು ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಹೋರಾಟವನ್ನು ಬಗ್ಗುಬಡಿಯಲು ಕೇಂದ್ರ ಸರಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರುತ್ತಿದೆ. ಗ್ಯಾಸ್ ಸಬ್ಸಿಡಿ ತೆಗೆಯಲಾಗಿದೆ. ಬಡವರು, ರೈತರು, ಕಾರ್ಮಿಕರು, ಮಧ್ಯಮ ವರ್ಗದವರಿಗೆ ಸಿಗುತ್ತಿದ್ದ ಸೌಲಭ್ಯಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇದರಿಂದ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೋರಾಟದ ಮೂಲಕ ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕಾಗಿದೆ. ರೈತ, ಕಾರ್ಮಿಕ, ಬಡವರ ವಿರೋಧಿ ಕೇಂದ್ರ ಸರಕಾರದÀ ವಿರುದ್ಧ ಸೋಮವಾರ ನಡೆಯುವ ಪ್ರತಿಭಟನೆಗೆ ಎಲ್ಲರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ನಂತರ 11.30ಕ್ಕೆ ಕೊಡವ ಸಮಾಜದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಲಿದ್ದು, ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಬಗ್ಗೆ ಚರ್ಚೆ ನಡೆಯಲಿದೆ.
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ಬಿ.ಎನ್.ಬಸವರಾಜ್, ಕಾಂಗ್ರೆಸ್ ಮುಖಂಡ ಕೆ.ಎ.ಯಾಕುಬ್ ಇದ್ದರು.

error: Content is protected !!