ಮತಾಂತರಗೊಂಡವರಿಗೆ ಯಾವುದೇ ಸೌಲಭ್ಯಗಳನ್ನು ನೀಡಬಾರದು : ಯೋಗೇಶ್ ಕುಮಾರ್ ಒತ್ತಾಯ

February 15, 2021

ಮಡಿಕೇರಿ ಫೆ.15 : ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೀಡುವ ಸೌಲಭ್ಯಗಳನ್ನು ಮತಾಂತರಗೊಂಡವರಿಗೆ ನೀಡದೆ ಇರಲು ಕೇಂದ್ರ ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮವೆಂದು ದಲಿತ ಸಂಘಟನೆಯ ಮುಖಂಡ ಹಾಗೂ ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಪ್ರಮುಖ ಹೆಚ್.ಎನ್.ಯೋಗೇಶ್ ಕುಮಾರ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಿರುವ ಮತಾಂತರಿಗಳ ವಿರುದ್ಧ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.
ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮೀಸಲು ಕ್ಷೇತ್ರದಿಂದ ಲೋಕಸಭೆ ಅಥವಾ ವಿಧಾನಸಭೆಗೆ ಸ್ಪರ್ಧಿಸಲು ಅವಕಾಶವಿಲ್ಲ ಹಾಗೂ ಯಾವುದೇ ಮೀಸಲಾತಿ ಸೌಲಭ್ಯಗಳನ್ನು ಪಡೆಯುವಂತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ತಿಳಿಸಿದ್ದು, ಇದು ಉತ್ತಮ ಬೆಳವಣಿಗೆಯಾಗಿದೆ. ಕೊಡಗು ಜಿಲ್ಲೆಯಲ್ಲೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಅನೇಕರು ಮತಾಂತರಗೊಂಡಿದ್ದರೂ ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಈ ರೀತಿಯ ಪ್ರಕರಣಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸೌಲಭ್ಯಕ್ಕಾಗಿ ಮತಾಂತರಿಗಳು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ಯೋಗೇಶ್ ಕುಮಾರ್ ಆಗ್ರಹಿಸಿದ್ದಾರೆ.
ಆಮಿಷಕ್ಕೆ ಬಲಿಯಾಗಿ ಮತಾಂತರಗೊಳ್ಳುತ್ತಿರುವುದಲ್ಲದೆ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೀಡುತ್ತಿರುವ ಸೌಲಭ್ಯಗಳನ್ನು ನಿಯಮ ಬಾಹಿರವಾಗಿ ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ನೈಜ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಅವರು, ಮತಾಂತರಗೊಂಡಿರುವವರ ಸಮೀಕ್ಷೆ ನಡೆಸಿ ಸಮಗ್ರ ವರದಿಯನ್ನು ತಯಾರಿಸುವ ಕಾರ್ಯವನ್ನು ಸರ್ಕಾರ ಮಾಡಬೇಕೆಂದು ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮಂದಿ ಇದ್ದು, ಮತಾಂತರ ಪ್ರಕರಣಗಳನ್ನು ನಿಯಂತ್ರಿಸುವ ಕಾರ್ಯಕ್ಕೂ ಜಿಲ್ಲಾಡಳಿತ ಮುಂದಾಗಬೇಕು. ಈಗಾಗಲೇ ನೀಡಲಾಗಿರುವ ಸರ್ಕಾರದ ಸೌಲಭ್ಯಗಳನ್ನು ಮತಾಂತರಗೊಂಡವರಿಂದ ಮರಳಿ ಪಡೆಯಬೇಕು ಎಂದು ಯೋಗೇಶ್ ಕುಮಾರ್ ಒತ್ತಾಯಿಸಿದ್ದಾರೆ.

error: Content is protected !!