ಶ್ರೀರಂಗಪಟ್ಟಣ-ಕುಶಾಲನಗರ ಚತುಷ್ಪಥ ರಸ್ತೆ ಕಾಮಗಾರಿಗೆ 15 ತಿಂಗಳಲ್ಲಿ ಚಾಲನೆ: ಸಂಸದ ಪ್ರತಾಪ್ ಸಿಂಹ

February 17, 2021

ಮಡಿಕೇರಿ ಫೆ.17 : ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದ ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯು 15 ತಿಂಗಳಲ್ಲಿ ಆರಂಭವಾಗಲಿದೆ ಎಂದು ಕೊಡಗು-ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೈಸೂರು-ಮಡಿಕೇರಿ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಸಾರ್ವಜನಿಕರ ಅನುಕೂಲಕ್ಕೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಶ್ರೀರಂಗಪಟ್ಟಣದಿಂದ ಕುಶಾಲನಗರದಲ್ಲಿ ವರೆಗೆ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಪ್ರತಾಪ್ ಸಿಂಹ ಅವರು ಹೇಳಿದರು.
ಕುಶಾಲನಗರದಲ್ಲಿ ಹೊಸ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಹಾಗೆಯೇ ಕುಶಾಲನಗರದ 25 ಅಥವಾ 50 ಹಾಸಿಗೆಯ ಇಎಸ್‍ಐ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಸದರು ಸಲಹೆ ಮಾಡಿದರು.
ಈಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಸರಿಪಡಿಸಬೇಕು. ತಡೆಗೋಡೆ ನಿರ್ಮಾಣ ಮಾಡಬೇಕು. ಜೊತೆಗೆ ಕುಶಾಲನಗರದ ತಾವರೆಕೆರೆ ಪ್ರತಿವರ್ಷ ಮಳೆಗಾಲದ ಅವಧಿಯಲ್ಲಿ ರಸ್ತೆ ಸಂಪರ್ಕ ವ್ಯತ್ಯಯ ಉಂಟಾಗುತ್ತಿದ್ದು, ರಸ್ತೆಯನ್ನು ಎತ್ತರಿಸುವಂತೆ ಪ್ರತಾಪ್ ಸಿಂಹ ಅವರು ಸೂಚಿಸಿದರು.
ಜಲ ಜೀವನ್ ಯೋಜನೆಯಡಿ ಜಿಲ್ಲೆಯ ಎಲ್ಲಾ ಬಡ ಕುಟುಂಬಗಳಿಗೂ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಸಂಬಂದಪಟ್ಟ ಎಂಜಿನಿಯರ್ ಗಳಿಗೆ ಪ್ರತಾಪ್ ಸಿಂಹ ಅವರು ನಿರ್ದೇಶನ ನೀಡಿದರು.
ಸರ್ಕಾರ ಜಲ ಜೀವನ್ ಯೋಜನೆ ಅನುಷ್ಠಾನಕ್ಕೆ 111 ಕೋಟಿ ರೂ. ಬಿಡುಗಡೆ ಮಾಡಿದ್ದು, ಪ್ರತಿ ಕುಟುಂಬಕ್ಕೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ಈ ಸಂಬಂಧ ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ಲೋಕಸಭಾ ಸದಸ್ಯರು ಸೂಚಿಸಿದರು.
ಈ ಕುರಿತು ಮಾಹಿತಿ ನೀಡಿದ ಜಿ.ಪಂ.ಇಇ. ಶ್ರೀಕಂಠಯ್ಯ ಅವರು ಜಿಲ್ಲೆಯಲ್ಲಿ 1,32752 ಕುಟುಂಬಗಳಿದ್ದು, ಪ್ರಥಮ ಹಂತದಲ್ಲಿ 54,216 ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗುತ್ತಿದೆ. ಉಳಿದ ಕುಟುಂಬಗಳಿಗೆ ಎರಡನೇ ಹಂತದಲ್ಲಿ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ನಿವೇಶನ ಹಾಗೂ ವಸತಿ ರಹಿತರ ಸಂಖ್ಯೆ ಎಷ್ಟು ಇದೆ ಎಂದು ತಾ.ಪಂ.ಇಒಗಳಿಂದ ಮಾಹಿತಿ ಪಡೆದ ಪ್ರತಾಪ್ ಸಿಂಹ ಅವರು ನಿವೇಶನ ಇರುವವರಿಗೆ ತ್ವರಿತವಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಸಂಸದರು ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ತಾ.ಪಂ.ಇಒ(ಮಡಿಕೇರಿ) ಲಕ್ಷ್ಮಿ ಅವರು ತಾಲ್ಲೂಕಿನಲ್ಲಿ 2,286 ನಿವೇಶನ ರಹಿತರು ಮತ್ತು 2 ಸಾವಿರದಷ್ಟು ವಸತಿ ರಹಿತ ಕುಟುಂಬಗಳಿದ್ದು, ಇವರಿಗೆ ನಿವೇಶನ ಮತ್ತು ವಸತಿ ಕಲ್ಪಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ವಿರಾಜಪೇಟೆ ತಾ.ಪಂ.ಇಒ(ವಿರಾಜಪೇಟೆ) ಅಪ್ಪಣ್ಣ ಅವರು ತಾಲ್ಲೂಕಿನಲ್ಲಿ 7720 ನಿವೇಶನ ರಹಿತ ಹಾಗೂ 2052 ವಸತಿ ರಹಿತ ಕುಟುಂಬಗಳಿವೆ ಎಂದು ಅವರು ಮಾಹಿತಿ ನೀಡಿದರು.
ಸೋಮವಾರಪೇಟೆ ತಾ.ಪಂ.ಇಒ(ಸೋಮವಾರಪೇಟೆ) ಜಯಣ್ಣ ಅವರು ತಾಲ್ಲೂಕಿನಲ್ಲಿ 4482 ವಸತಿ ರಹಿತ ಕುಟುಂಬಗಳು ಮತ್ತು 5684 ನಿವೇಶನ ರಹಿತ ಕುಟುಂಬಗಳಿವೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಶ್ವಿಮಘಟ್ಟ ಕಾರ್ಯಪಡೆಯ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ ಅವರು ಜಿಲ್ಲೆಯ ಎಲ್ಲಾ ಬಡ ಕುಟುಂಬಗಳಿಗೂ ವಸತಿ ಹಾಗೂ ನಿವೇಶನ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಕ್ರಮ ಸಕ್ರಮ ಯೋಜನೆಯಡಿ 4,500 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಇದನ್ನು ಪರಿಹರಿಸುವಲ್ಲಿ ಆರ್‍ಟಿಸಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಜಂಟಿ ಸರ್ವೆ ಮಾಡಬೇಕಿದೆ ಎಂದು ರವಿಕುಶಾಲಪ್ಪ ಅವರು ತಿಳಿಸಿದರು.
ಕನಿಷ್ಠ ಮೂಲ ಸೌಲಭ್ಯವನ್ನಾದರೂ ಜಿಲ್ಲೆಯ ಬಡ ಜನರಿಗೆ ಕಲ್ಪಿಸದಿದ್ದಲ್ಲಿ ಸಾರ್ವಜನಿಕರಿಗೆ ಯಾವ ರೀತಿಯ ಸಂದೇಶ ಹೋಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರಬೇಕು ಎಂದು ರವಿಕುಶಾಲಪ್ಪ ಅವರು ತಿಳಿಸಿದರು.
ಜಿಲ್ಲೆಯಲ್ಲಿನ ಆದಿವಾಸಿಗಳು ಇಂದಿಗೂ ಸಹ ಸ್ವಾತಂತ್ರ್ಯ ಪೂರ್ವದಂತೆ ಜೀವನ ನಡೆಸುತ್ತಿದ್ದಾರೆ. ಇವರು ಮುಖ್ಯವಾಹಿನಿಗೆ ಬರುವುದು ಬೇಡವೇ ಎಂದು ರವಿಕುಶಾಲಪ್ಪ ಅವರು ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಜಿಲ್ಲೆಯಲ್ಲಿ 165 ಹಾಡಿಗಳಲ್ಲಿ 8 ಸಾವಿರಕ್ಕೂ ಹೆಚ್ಚು ಕುಟುಂಬಗಳಿದ್ದು, ಜಿಲ್ಲೆಯಲ್ಲಿ 4,745 ಕುಟುಂಬಗಳು ಲೈನ್‍ಮನೆಗಳಲ್ಲಿ ಮತ್ತು 4,150 ಕುಟುಂಬಗಳು ಹಾಡಿಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ರಾಜೀವ್ ಗಾಂಧಿ ವಸತಿ ಯೋಜನೆ ಅಥವಾ ಕೊಳಚೆ ನಿರ್ಮೂಲನ ಮಂಡಳಿಯ ಅಧಿಕಾರಿಗಳ ಜೊತೆ ಚರ್ಚಿಸಿ ಮನೆ ನಿರ್ಮಾಣಕ್ಕೆ ಕ್ರಮವಹಿಸುವಂತೆ ಸಂಸದರು ಸೂಚಿಸಿದರು.
2022 ರ ವೇಳೆಗೆ ಪ್ರತೀ ವಸತಿ ರಹಿತ ಕುಟುಂಬಗಳಿಗೆ ಮನೆ ನಿರ್ಮಿಸಬೇಕು. ಪ್ರಧಾನಮಂತ್ರಿ ಅವರ ಕನಸನ್ನು ನನಸು ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅವರು ಹೇಳಿದರು.
ವಸತಿ ಯೋಜನೆ ಅನುಷ್ಠಾನ ಸಂಬಂಧ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ವಸತಿ ರಹಿತರಿಗೆ ಮನೆ ನಿರ್ಮಿಸಿಕೊಡಲು ಮನವಿ ಮಾಡಲಾಗುವುದು ಎಂದು ಪ್ರತಾಪ್ ಸಿಂಹ ಅವರು ಹೇಳಿದರು.
ಕೇಂದ್ರ ಪುರಸ್ಕøತ ಯೋಜನಾ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು. ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸದ್ಭಳಕೆ ಮಾಡಬೇಕು ಎಂದು ಅವರು ತಿಳಿಸಿದರು.
ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯಬೇಕು. ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಬೇಕು. ನರೇಗಾ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಪ್ರತಾಪ್ ಸಿಂಹ ಅವರು ನಿರ್ದೇಶನ ನೀಡಿದರು.
ಸೌಭಾಗ್ಯ ಯೋಜನೆಯಡಿ ಇದುವರೆಗೆ ಜಿಲ್ಲೆಯಲ್ಲಿ ಎಷ್ಟು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಎಷ್ಟು ಕುಟುಂಬಗಳಿವೆ ಎಂದು ಪ್ರತಾಪ್ ಸಿಂಹ ಅವರು ಮಾಹಿತಿ ಪಡೆದರು.
ಈ ಬಗ್ಗೆ ಮಾಹಿತಿ ನೀಡಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಇಇ ಅಶೋಕ್ ಅವರು ಸೌಭಾಗ್ಯ ಯೋಜನೆಯಡಿ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಆದರೆ ಅರಣ್ಯ ಪ್ರದೇಶದ ಸುಮಾರು 65 ಕುಟುಂಬಗಳಿಗೆ ಸೌಭಾಗ್ಯ ಯೋಜನೆ ಕಲ್ಪಿಸಲು ಬಾಕಿ ಇದೆ ಎಂದು ಅಶೋಕ್ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರವಿಕುಶಾಲಪ್ಪ ಅವರು ಸೌಭಾಗ್ಯ ಯೋಜನೆ ಬಿಟ್ಟು ಹೋಗಿರುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಗ್ರಾಮೀಣ ಹಾಡಿ ಕುಟುಂಬಗಳಿಗೆ ರಸ್ತೆ, ಸೇತುವೆ, ವಿದ್ಯುತ್ ಸಂಪರ್ಕ ಮತ್ತಿತರ ಕನಿಷ್ಠ ಮೂಲ ಸೌಲಭ್ಯ ಬೇಡವೇ ಎಂದು ಪ್ರಶ್ನಿಸಿದರು.
ಸೌಭಾಗ್ಯ ಯೋಜನೆಯಡಿ ಸಂಪಾಜೆ, ಚೆಂಬು, ಪೆರಾಜೆಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಅಡಚಣೆ ಉಂಟುಮಾಡಬಾರದು. ಆದಿವಾಸಿ ಗಿರಿಜನರಿಗೆ ಸೌಲಭ್ಯವನ್ನು ಕಲ್ಪಿಸಬೇಕು ಎಂದು ರವಿಕುಶಾಲಪ್ಪ ಅವರು ಹೇಳಿದರು.
ಕಸ ವಿಲೇವಾರಿ ಘಟಕ ನಿರ್ಮಾಣ ಸಂಬಂಧ ಬಾಕಿ ಇರುವ ಗ್ರಾ.ಪಂ.ಗಳಲ್ಲಿ ಜಾಗ ಒದಗಿಸುವಂತೆ ಸಂಸದರು ನಿರ್ದೇಶನ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪ್ಲಾಸ್ಟಿಕ್ ಮಾರುವುದು ಅಥವಾ ಪ್ಲಾಸ್ಟಿಕ್ ಬಳಸುವುದು ಕಂಡುಬಂದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಬೇಕು. ಈ ಸಂಬಂಧ ಎಚ್ಚರಿಸಬೇಕು ಎಂದು ಪ್ರತಾಪ್ ಸಿಂಹ ಅವರು ನುಡಿದರು.
ನಗರ ಪಟ್ಟಣ ಪ್ರದೇಶಗಳಲ್ಲಿ ಪೋಸ್ಟರ್, ಪ್ಲೆಕ್ಸ್‍ಗಳನ್ನು ಬಳಸುತ್ತಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸದರು ಹೇಳಿದರು.
ಪ್ರತೀ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ಇರಬೇಕು. ಆ ನಿಟ್ಟಿನಲ್ಲಿ ಯಾವ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ಮಶಾನ ಜಾಗವಿಲ್ಲ. ಅಂತಹ ಗ್ರಾಮಗಳನ್ನು ಗುರುತಿಸಿ ಜಾಗ ಒದಗಿಸಬೇಕು ಎಂದು ಸಂಸದರು ಹೇಳಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆಗಳನ್ನು ಸರಿಪಡಿಸಬೇಕು. ಗ್ರಾಮೀಣ ರಸ್ತೆಗಳು ಸುಧಾರಣೆಯಾಗಬೇಕು ಎಂದು ಸಂಸದರು ಹೇಳಿದರು.
ಮಡಿಕೇರಿ ನಗರಕ್ಕೆ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಕುಂಡಾಮೇಸ್ತ್ರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಆ ನಿಟ್ಟಿನಲ್ಲಿ ಮುಂದಿನ 50 ವರ್ಷದ ಯೋಜನೆ ರೂಪಿಸಬೇಕು ಎಂದು ಪ್ರತಾಪ್ ಸಿಂಹ ಅವರು ಸಲಹೆ ಮಾಡಿದರು.
ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಮಡಿಕೇರಿ ನಗರದ ಕಸವನ್ನು ಸ್ಟೋನ್ ಹಿಲ್‍ಗೆ ಸುರಿಯುತ್ತಿದ್ದು, ಬೆಟ್ಟ ಪ್ರದೇಶವಾಗಿರುವುದರಿಂದ ಮಳೆಗಾಲದ ಸಂದರ್ಭದಲ್ಲಿ ಘನ ತ್ಯಾಜ್ಯದ ನೀರು ಸೋರುತ್ತದೆ. ಆದ್ದರಿಂದ ಪ್ರತ್ಯೇಕ ಜಾಗ ಗುರುತಿಸಿ ಕಸ ವಿಲೇವಾರಿ ಮಾಡಬೇಕು ಎಂದು ಪ್ರತಾಪ್ ಸಿಂಹ ಅವರು ಸಲಹೆ ಮಾಡಿದರು.
ವಿದ್ಯುತ್ ಸಂಪರ್ಕ, ರಸ್ತೆ ನಿರ್ಮಾಣ ಮತ್ತಿತರ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಹೇಳಿದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶ ಹೆಚ್ಚಳ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು. ಆ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡಬೇಕು ಎಂದು ಸಂಸದರು ಸೂಚಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪ್ರತ್ಯೇಕವಾಗಿ ಕೆಎಸ್‍ಆರ್‍ಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡುವಂತೆ ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಿಗೆ ಸಂಸದರು ಸೂಚಿಸಿದರು.
ಈ ಕುರಿತು ಮಾಹಿತಿ ನೀಡಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ ಅವರು ಜಿಲ್ಲಾ ಆಸ್ಪತ್ರೆಯಿಂದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ತೆರಳಲು ಬಸ್ ಸೌಲಭ್ಯ ಕಲ್ಪಿಸಬೇಕಿದೆ ಎಂದು ಸಂಸದರ ಗಮನಕ್ಕೆ ತಂದರು.

error: Content is protected !!