ಮಾ.4 ರಂದು ವಿಧಾನಸೌಧ ಚಲೋ ಹೋರಾಟ : ವಿರಾಜಪೇಟೆ, ಸೋಮವಾರಪೇಟೆಯಲ್ಲೂ ಪ್ರತಿಭಟನೆ

February 20, 2021

ಮಡಿಕೇರಿ ಫೆ.19 : ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಕೃಷಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಮಾ.4 ರಂದು ವಿಧಾನಸೌಧ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟಕ್ಕೆ ಪೂರಕವಾಗಿ ಫೆ.22 ರಂದು ಸೋಮವಾರಪೇಟೆ ಮತ್ತು ಫೆ.24 ರಂದು ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 30 ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿಧಾನಸೌಧ ಚಲೋ ಹೋರಾಟ ನಡೆಯುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಸಿಐಟಿಯು ಸಂಯೋಜಿತ ಸಂಘಟನೆಗಳ ಸದಸ್ಯರು ಬೆಂಗಳೂರಿಗೆ ತೆರಳಲಿದ್ದಾರೆ. ಕೊಡಗು ಜಿಲ್ಲೆಯಿಂದಲೂ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.
ಫೆ.22 ರಂದು ಸೋಮವಾರಪೇಟೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ಫೆ.24 ರಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಎ.ಮಹದೇವು ಮಾತನಾಡಿ ದೇಶದಲ್ಲಿ ದಿನದಿಂದ ದಿನಕ್ಕೆ ತೈಲೋತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದ್ದು, ಬಡವರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲದಾಗಿದೆ. ಬಂಡವಾಳಶಾಹಿಗಳ ಆದಾಯ ಶೇ.60 ರಷ್ಟು ಹೆಚ್ಚಾಗಿದ್ದು, ಜನಸಾಮ್ಯರು ಆದಾಯವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು.
ಉಪಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ ಸ್ವದೇಶಿ ಮಂತ್ರ ಜಪಿಸುತ್ತಾ ಅಧಿಕಾರಕ್ಕೆ ಬಂದವರು ಈಗ ವಿದೇಶಿ ಬಂಡಾವಳವನ್ನು ಆಹ್ವಾನಿಸುತ್ತಿದ್ದಾರೆ. ಅಲ್ಲದೆ ಬಹುತೇಕ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುತ್ತಿದ್ದಾರೆ ಎಂದು ಟೀಕಿಸಿದರು.
ಖಜಾಂಚಿ ಹೆಚ್.ಟಿ.ರಮೇಶ್ ಮಾತನಾಡಿ ಬೆಲೆ ಏರಿಕೆ ಕ್ರಮವನ್ನು ಖಂಡಿಸಿದರು.

error: Content is protected !!