ಗಾಳಿಬೀಡು ಶಾಲಾ ಶಿಕ್ಷಕರಿಗೆ ಸನ್ಮಾನ : ವಿದ್ಯೆ ಕಲಿಸಿದ ಗುರುಗಳನ್ನು ಗೌರವಿಸಿ : ಕುಡೆಕಲ್ ಸಂತೋಷ್ ಕಿವಿಮಾತು

February 21, 2021

ಮಡಿಕೇರಿ ಫೆ.21 : ವಿದ್ಯೆ ಕಲಿಸಿದ ಗುರುಗಳನ್ನು ಮರೆಯದೆ ಅವರ ಪರಿಶ್ರಮವನ್ನು ನೆನಪಿಸಿಕೊಳ್ಳುವ ಮತ್ತು ಗೌರವಿಸುವ ಮನೋಭಾವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕೆಂದು ಪತ್ರಕರ್ತ ಕುಡೆಕಲ್ ಸಂತೋಷ್ ಕಿವಿಮಾತು ಹೇಳಿದ್ದಾರೆ.
ಗಾಳಿಬೀಡು ಸರಕಾರಿ ಪ್ರೌಢಶಾಲೆ 2020-21 ನೇ ಸಾಲಿನಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಗಳಿಸಿದ್ದು, ಈ ಸಾಧನೆಗೆ ಕಾರಣಕರ್ತರಾದ ಶಿಕ್ಷಕರನ್ನು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಶಾಲೆಯಲ್ಲಿ ನಡೆದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಂತೋಷ್, ಶಿಕ್ಷಣದಿಂದ ಮಾತ್ರ ಸಾಧನೆ ಸಾಧ್ಯವಾಗಲಿದ್ದು, ಯಾವುದೇ ವ್ಯಕ್ತಿ ಉನ್ನತ ಸ್ಥಾನದಲ್ಲಿದ್ದಾನೆ ಎಂದರೆ ಅದಕ್ಕೆ ಪ್ರಮುಖ ಕಾರಣ ವಿದ್ಯೆ ಕಲಿಸಿದ ಗುರುಗಳ ಪರಿಶ್ರಮ ಎಂದು ಅಭಿಪ್ರಾಯಪಟ್ಟರು.
ತ್ಯಾಗಮಯಿ ಶಿಕ್ಷಕರ ಸೇವೆಯನ್ನು ಗುರುತಿಸಿ ನಿರಂತರವಾಗಿ ಸನ್ಮಾನ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿರುವ ದಲಿತ ಸಂಘರ್ಷ ಸಮಿತಿಯ ಕಾರ್ಯ ಶ್ಲಾಘನೀಯವೆಂದರು.
ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸಾಧನೆ ಇತರರಿಗೆ ಮಾದರಿಯಾಗಿದೆ ಎಂದರು. ಜೀವನದ ಕಷ್ಟ, ಸುಖಗಳನ್ನು ಕಲಿಸುವ ಶಕ್ತಿ ಸರ್ಕಾರಿ ಶಾಲೆಗಳಿಗಿದ್ದು, ಶಿಕ್ಷಕರ ನಿಸ್ವಾರ್ಥ ಸೇವೆಯಿಂದ ಖಾಸಗಿ ಶಾಲೆಗಳಿಗೆ ಸರಿಸಾಟಿಯಾದ ಶಿಕ್ಷಣ ದೊರೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಮಾತನಾಡಿ ಸರ್ಕಾರಿ ಶಾಲೆಗಳ ಪರೀಕ್ಷಾ ಫಲಿತಾಂಶ ಶೇಕಡಾವಾರು ಉತ್ತಮ ಮಟ್ಟದಲ್ಲಿದ್ದು, ಇಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರುತ್ತಿರುವುದು ಹೆಮ್ಮೆ ಪಡುವ ವಿಚಾರವಾಗಿದೆ ಎಂದರು.
ಅಹಿಂದ ಒಕ್ಕೂಟದ ಕಾರ್ಯಾಧ್ಯಕ್ಷ ಕೆ.ಟಿ.ಬೇಬಿಮ್ಯಾಥ್ಯು ಮಾತನಾಡಿ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳಿಗೆ ಕೊರತೆ ಇರಬಹುದು, ಆದರೆ ಶಿಕ್ಷಣದ ಗುಣಮಟ್ಟಕ್ಕೆ ಕೊರತೆ ಇಲ್ಲವೆಂದು ಅಭಿಪ್ರಾಯಪಟ್ಟರು. ದೇಶದ ಅಭಿವೃದ್ಧಿಯ ಮೂಲ ಶಕ್ತಿ ಶಿಕ್ಷಕರು ಎಂದು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳು ತಮ್ಮ ಜೀವನದುದ್ದಕ್ಕೂ ಗುರುಗಳನ್ನು ಸ್ಮರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಪ್ರತಿಯೊಬ್ಬ ವಿದ್ಯಾರ್ಥಿಯ ದಾರಿದೀಪವಾಗಿರುವ ಶಿಕ್ಷಕರನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು. ಮುಂದಿನ ದಿನಗಳಲ್ಲಿ ಸನ್ಮಾನ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ವಿದ್ಯೆ ಕಲಿಸಿದ ಗುರುಗಳ ಮೇಲೆ ಗೌರವ ಹೆಚ್ಚಾಗುವಂತೆ ಮಾಡಲಾಗುವುದು ಎಂದರು. ಬಡತನದಲ್ಲಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡಬೇಕೆನ್ನುವ ಉದ್ದೇಶದಿಂದ ಸಮಿತಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳ ಮೂಲಕ ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು.
ಸಮಿತಿಯ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ಮಾತನಾಡಿ ಶಿಕ್ಷಕರು ದೇವರಿಗೆ ಸಮಾನ, ಶೈಕ್ಷಣಿಕ ಸಾಧನೆಯೇ ವಿದ್ಯಾರ್ಥಿಗಳು ಶಿಕ್ಷಕರ ಪರಿಶ್ರಮಕ್ಕೆ ನೀಡುವ ಪ್ರತಿಫಲ ಎಂದರು.
ಶೇ.100 ರ ಸಾಧನೆಗೆ ಕಾರಣಕರ್ತರಾದ ಎಲ್ಲಾ ಶಿಕ್ಷಕರನ್ನು ಮತ್ತು ಅಡುಗೆ ಸಹಾಯಕರಾಗಿ ಕಳೆದ ಹಲವು ವರ್ಷಗಳಿಂದ ಗಾಳಿಬೀಡು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಚೋಂದಮ್ಮ ಹಾಗೂ ಸುಮಿತ್ರ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಶಿಕ್ಷಕರು ತಮ್ಮ ಶೈಕ್ಷಣಿಕ ಜೀವನದಲ್ಲಿ ದಾರಿದೀಪ ತೋರಿದ ಶಿಕ್ಷಕರುಗಳನ್ನು ನೆನಪಿಸಿಕೊಂಡರು.
ಸಮಾಜಿಕ ಕಾರ್ಯಕರ್ತ ಕ್ರಿಯೆಟಿವ್ ಖಲೀಲ್, ಪ್ರಮುಖರಾದ ಮೀನಾಜ್ó ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕÀ ರಮೇಶ್ ಅವರು ಸ್ವಾಗತಿಸಿ ನಿರೂಪಿಸಿದರು, ಶಿಕ್ಷಕಿ ಕರುಣಾ ವಂದಿಸಿದರು.

error: Content is protected !!