ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ನಿವೇಶನ ಹಾಗೂ ಮನೆ ನಿರ್ಮಾಣದ ಮಾಹಿತಿ ಪಟ್ಟಿ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

March 1, 2021


ಮಡಿಕೇರಿ.ಮಾ.01 : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ಇದುವರೆಗೆ ನಿವೇಶನ, ಮನೆ ನಿರ್ಮಾಣ ಹಾಗೂ ಸ್ಮಶಾನಕ್ಕೆ ಕಲ್ಪಿಸಿರುವ ಭೂಮಿ ಬಗ್ಗೆ ಮಾಹಿತಿಯ ಪಟ್ಟಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಬಗ್ಗೆ ಸೋಮವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಗ್ರಾಮಗಳು ಹಾಗೂ ಹಾಡಿಗಳಲ್ಲಿ ಇರುವ ಪರಿಶಿಷ್ಟರ ಜನಸಂಖ್ಯೆ, ಜೊತೆಗೆ ಇದುವರೆಗೆ ಕಲ್ಪಿಸಿರುವ ನಿವೇಶನ ಹಾಗೂ ಮನೆ ನಿರ್ಮಾಣದ ಮಾಹಿತಿಯ ಪಟ್ಟಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ನಿವೇಶನ ರಹಿತ ಕುಟುಂಬಗಳು ಹಾಗೂ ನಿವೇಶನವಿದ್ದು ಮನೆ ನಿರ್ಮಾಣಕ್ಕೆ ಬಾಕಿ ಇರುವ ಕುಟುಂಬಗಳ ಬಗ್ಗೆ ಮಾಹಿತಿ ಒದಗಿಸಬೇಕು. ಪರಿಶಿಷ್ಟರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ಸಂಬಂಧ ಕಾರ್ಯಾಗಾರ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಗೃಹಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ನಿವೇಶನ ಹಾಗೂ ವಸತಿ ಕಲ್ಪಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಗೃಹ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಪೌರಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು. ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಚಾರುಲತ ಸೋಮಲ್ ಅವರು ಸೂಚಿಸಿದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಮತ್ತು ಮುತ್ತಪ್ಪ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಿರ್ಮಿಸಲು ಜಾಗ ಗುರುತಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂಬಂಧ ಹಲವು ದಶಕಗಳಿಂದ ಮನವಿ ಮಾಡಿಕೊಂಡು ಬರಲಾಗಿದೆ. ಆದರೆ ಯಾವುದೇ ಕೆಲಸಗಳು ಕಾರ್ಯಗತವಾಗಿಲ್ಲ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಪಳನಿ ಪ್ರಕಾಶ್ ಅವರು ಮಾತನಾಡಿ 94ಸಿ ಮತ್ತು 94ಸಿಸಿ ರಡಿ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ಹಕ್ಕುಪತ್ರ ನೀಡುವಂತಾಗಬೇಕು ಎಂದು ಅವರು ಮನವಿ ಮಾಡಿದರು.
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಕಾಮಗಾರಿಗಳಲ್ಲಿ ಸರ್ಕಾರದ ನಿರ್ದೇಶನದಂತೆ ಪರಿಶಿಷ್ಟ ಜನಾಂಗದವರಿಗೆ ಮೀಸಲಾತಿಯನ್ನು ಕಡ್ಡಾಯವಾಗಿ ಕಲ್ಪಿಸಬೇಕು ಎಂದು ಅವರು ಕೋರಿದರು.
ಕಾಡುಪ್ರಾಣಿಗಳ ಹಾವಳಿಗೆ ತುತ್ತಾದ ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಪರಿಹಾರ ನೀಡಬೇಕು. ಜೊತೆಗೆ ಕುಟುಂಬದವರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಲೈನ್‍ಮನೆಯಲ್ಲಿ ವಾಸಿಸುವ ಪರಿಶಿಷ್ಟ ಕುಟುಂಬಗಳಿಗೆ ವಸತಿ ಕಲ್ಪಿಸಬೇಕು ಎಂದು ಪಳನಿ ಪ್ರಕಾಶ್ ಅವರು ಮನವಿ ಮಾಡಿದರು.
ಸಮಿತಿ ಸದಸ್ಯರಾದ ಸುಕುಮಾರ್ ಮತ್ತು ಜಾಯ್ಸ್ ಮೆನೇಜಸ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಕನಿಷ್ಠ ಮೂಲ ಸೌಲಭ್ಯವನ್ನಾದರೂ ಕಲ್ಪಿಸಬೇಕು. ದೌರ್ಜನ್ಯ ನಡೆಯದಂತೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್ ಮತ್ತು ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಕಳೆದ ಬಾರಿ ನಡೆದ ಸಭೆಯ ಅನುಪಾಲನಾ ವರದಿ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ನಾನಾ ಇಲಾಖೆ ಅಧಿಕಾರಿಗಳು ಇದ್ದರು.

error: Content is protected !!