ಅನುದಾನ ಬಳಕೆ ಮಾಹಿತಿ ನೀಡಲು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಸೂಚನೆ

March 1, 2021

ಮಡಿಕೇರಿ ಮಾ. 1 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಕಳೆದ ಬಾರಿ ಅನುದಾನ ಬಳಕೆ ಬಗ್ಗೆ ಮಾಹಿತಿ ಒದಗಿಸುವಂತೆ ಸಮಾಜ ಕಲ್ಯಾಣ ಹಾಗೂ ಐಟಿಡಿಪಿ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ ಸರ್ಕಾರ ಹಲವು ಕಾರ್ಯಕ್ರಮ ನೀಡುತ್ತಿದೆ. ಈ ಅನುದಾನ ವ್ಯಪಗತವಾಗದಂತೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಕಳೆದ ಸಾಲಿನ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರು ಕಲ್ಪಿಸಬೇಕು. ಸ್ನಾನಕ್ಕೆ ಬಿಸಿನೀರು ಇರಬೇಕು. ಶೌಚಾಲಯ ಸೇರಿದಂತೆ ವಿದ್ಯಾರ್ಥಿ ನಿಲಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ವಿದ್ಯಾರ್ಥಿ ನಿಲಯಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ವಿದ್ಯಾರ್ಥಿ ನಿಲಯದಲ್ಲಿ ಪೀಠೋಪಕರಣ, ಗ್ರಂಥಾಲಯ ನಿರ್ವಹಣೆ ಮಾಡಬೇಕು. ಬಿಡುಗಡೆಯಾದ ಅನುದಾನ ತ್ವರಿತವಾಗಿ ವಿನಿಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ವ್ಯಪಗತವಾಗದಂತೆ ಗಮನಹರಿಸಬೇಕು ಎಂದು ಚಾರುಲತ ಸೋಮಲ್ ಅವರು ಸೂಚಿಸಿದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನ ಎಂ.ಷೇಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ್, ಸೆಸ್ಕ್ ಎಂಜಿನಿಯರ್ ದೇವಯ್ಯ, ಕೈಮಗ್ಗ ಮತ್ತು ಜವುಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

error: Content is protected !!