ಕೊಡವ ಸಮಾಜಗಳ ಒಕ್ಕೂಟದ ಸಭೆ : ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ನಿರ್ಧಾರ

ಮಡಿಕೇರಿ ಮಾ.4 : ಕೊಡಗಿನ ಕ್ರೀಡಾ ಕ್ಷೇತ್ರದಲ್ಲಿ ಸೌಲಭ್ಯಗಳ ಕೊರತೆಯಿಂದ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾನಿಯವನ್ನು ಸ್ಥಾಪಿಸುವ ಅನಿವಾರ್ಯತೆ ಇರುವುದರಿಂದ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಕೊಡವ ಸಮಾಜಗಳ ಒಕ್ಕೂಟ ನಿರ್ಧರಿಸಿದೆ.
ಬಾಳುಗೋಡಿನ ಕೊಡವ ಸಮಾಜದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಜಿಲ್ಲೆಯನ್ನು ಕಾಡುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಕ್ರೀಡಾ ಕ್ಷೇತ್ರಕ್ಕೆ ಹೆಸರಾದ ಕೊಡಗಿನ ಕ್ರೀಡಾ ಪ್ರತಿಭೆಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಗಳಿಸಿದ್ದಾರೆ. ಹಾಕಿ, ಕ್ರಿಕೆಟ್, ಟೆನ್ನಿಸ್ ಮುಂತಾದ ಕ್ರೀಡೆಗಳಲ್ಲಿ ಹೆಸರುವಾಸಿಯಾಗಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕೊಡಗಿನಲ್ಲಿ ಕ್ರೀಡಾ ವಿಶ್ವವಿದ್ಯಾನಿಯದ ಅವಶ್ಯಕತೆ ಇದೆ ಎಂದು ಒಕ್ಕೂಟದ ಪ್ರಮುಖರು ಅಭಿಪ್ರಾಯಪಟ್ಟರು.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕೊಡಗಿನಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟ ಮತ್ತು ಗದ್ದೆಗಳು ನಾಶವಾಗುತ್ತಿರುವುದಲ್ಲದೆ ಜೀವಹಾನಿಯೂ ಸಂಭವಿಸುತ್ತಿದೆ. ಹುಲಿದಾಳಿಯಿಂದ ಅಮಾಯಕರಿಬ್ಬರು ಬಲಿಯಾಗಿದ್ದಾರೆ, ಆದರೆ ಸರ್ಕಾರ ಇಲ್ಲಿಯವರೆಗೆ ತನ್ನ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರುಗಳನ್ನು ಭೇಟಿಯಾಗಿ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡಲು ಮತ್ತು ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಲು ಸಭೆ ನಿರ್ಧರಿಸಿತು. ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಂಟಿ ಕಾರ್ಯದರ್ಶಿ ಮಿದೇರಿರ ನವೀನ್, ಮಾಜಿ ಅಧ್ಯಕ್ಷ ಮಲ್ಲೇಂಗಡ ದಾದ ಬೆಳ್ಳಿಯಪ್ಪ ಉಪಸ್ಥಿತರಿದ್ದರು. ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ವಂದಿಸಿದರು.

