ಬ್ಯಾಡಗೊಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಆರಂಭಿಸದಂತೆ ಒತ್ತಾಯಿಸಿ ಗ್ರಾಮಸ್ಥರಿಂದ ಪ್ರತಿಭಟನೆ

March 5, 2021

ಕುಶಾಲನಗರ ಮಾ. 5 : ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಆರಂಭಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸುವುದರೊಂದಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ಬ್ಯಾಡಗೊಟ್ಟ ಗ್ರಾಮದಲ್ಲಿ ಗುರುತಿಸಿರುವ ಜಾಗದ ಹದ್ದುಬಸ್ತು ಗುರುತಿಸಿ ನಂತರ ಬೇಲಿ ನಿರ್ಮಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಆದೇಶಿಸಿರುವುದರಿಂದ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಧಳ ವಿಕ್ಷೇಣೆ ಮಾಡಿದರು.

ಈ ಕೇಂದ್ರದಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಿದರೆ ಅನೇಕ ಪರಿಸರ ಹಾಳಾಗುವುದರ ಜೊತೆಗೆ ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ. ಇದರಿಂದಾಗಿ ಸಮಸ್ಯೆಗಳು ಹೆಚ್ಚಾಗುತ್ತವೆ ಎಂದು ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದರು.

ಸ್ಧಳ ವಿಕ್ಷಣೆಗೆ ಬಂದ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೂ ಸ್ಧಳದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಆದರೂ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸದೆ ಮುಂದುವರಿದಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದ ಮುಖ್ಯಸ್ಧರಾದ ಅಪ್ಪು, ,ಮುತ್ತ, ಕುಮಾರ್, ಅನಿತಾ ಸೇರಿದಂತೆ 359 ಕುಟುಂಬದ ಸದಸ್ಯರು ಭಾಗವಹಿಸಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಅವರಿಗೆ ಮನವಿ ಪತ್ರ ನೀಡಿದರು.

ಬ್ಯಾಡಗೊಟ್ಟ ಗ್ರಾಮದಿಂದ ಕೂಡಿಗೆವರೆಗೆ ಮುಖ್ಯ ರಸ್ತೆಯ ಎರಡು ಕಿಲೋಮೀಟರ್ ದೂರದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದ ಪ್ರತಿಭಟನಾಕಾರರು, ಗ್ರಾಮ ಪಂಚಾಯತಿ ಎದುರು ಘೋಷಣೆಗಳನ್ನು ಕೂಗಿ ಪ್ರತಿಭಟಿಸುವ ಮೂಲಕ ಮನವಿ ಸಲ್ಲಿಸಿ, ಮುಂದಿನ ದಿನಗಳಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಲು ಮುಂದಾದರೆ ವಿವಿಧ ಸಂಘಟನೆಗಳ ಮುಖಾಂತರ ಉಗ್ರವಾಗಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರ ಪ್ರತಿಕ್ರಿಯೆ ಬಯಸಿದಾಗ, ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಜಾಗವನ್ನು ಗುರುತಿಸಿ ಅದರ ಸಾಧಕ ಬಾಧಕಗಳ ಬಗ್ಗೆ ಅವರೊಂದಿಗೆ ಚರ್ಚಿಸಿ ನಂತರ ತೀರ್ಮಾನವನ್ನು ಮೇಲಧಿಕಾರಿಗಳು ತೆಗೆದುಕೊಂಡಿರುತ್ತಾರೆ. ಅವರ ಅದೇಶದಂತೆ ಗ್ರಾಮ ಪಂಚಾಯತಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.

error: Content is protected !!