ತುಳು ಸಾಹಿತ್ಯ ಅಕಾಡೆಮಿಯಿಂದ ಮಾ.7 ರಂದು ಗೌರವ ಪ್ರಶಸ್ತಿ ಪ್ರದಾನ ಸಮಾರಂಭ

March 5, 2021

ಮಡಿಕೇರಿ ಮಾ.5 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಾ.7 ರಂದು ಬೆಂಗಳೂರಿನಲ್ಲಿ ಗೌರವ ಪ್ರಶಸ್ತಿ ಪ್ರದಾನ, ಪುಸ್ತಕ ಬಹುಮಾನ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ದಯಾನಂದ ಜಿ.ಕತ್ತಲ್‍ಸಾರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಹಾಗೂ ಬಂದರುಗಳ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ಮಾಜಿ ಸಚಿವ ಸಿ.ಟಿ.ರವಿ, ಧರ್ಮಸ್ಥಳ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್, ರಾಜ್ಯಸಭಾ ಸದಸ್ಯ ಕೆ.ನಾರಾಯಣ, ಉದ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ ಪಾಲ್ಗೊಳ್ಳಲಿದ್ದಾರೆ.
ಸಂಜೆ 4 ಗಂಟೆಗೆ ಅರಣ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ್ ಪೂಜಾರಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮುಖವಾಣಿ “ಮದಿಪು” ಬಿಡುಗಡೆ ಮಾಡಲಿದ್ದಾರೆ.
ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ.ಕತ್ತಲ್‍ಸಾರ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲಡ್ಕ ಅಭಿನಂದನಾ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭಾಗವಹಿಸಲಿದ್ದಾರೆ.

error: Content is protected !!