ಸೋಮವಾರಪೇಟೆ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲು ಮನವಿ : ಜಿಲ್ಲಾಧಿಕಾರಿಗಳನ್ನು ಭೇಟಿಯಾದ ನಿಯೋಗ

March 5, 2021

ಮಡಿಕೇರಿ ಮಾ.5 : ಸೋಮವಾರಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಜಿಲ್ಲಾಡಳಿತ ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸೋಮವಾರಪೇಟೆ ಪ.ಪಂ ಪ್ರತಿನಿಧಿಗಳ ನಿಯೋಗ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಪ.ಪಂ ಅಧ್ಯಕ್ಷೆ ನಳಿನಿ ಗಣೇಶ್ ಅವರ ನೇತೃತ್ವದ ತಂಡ ತಾಲ್ಲೂಕು ಕೇಂದ್ರವಾಗಿರುವ ಸೋಮವಾರಪೇಟೆ ಪಟ್ಟಣದ ಅಭಿವೃದ್ಧಿಗೆ ವಿಶೇಷ ಆಸಕ್ತಿ ತೋರುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿತು.
ಜನಸಾಮಾನ್ಯರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಸರ್ಕಾರಿ ಕಚೇರಿಗಳಲ್ಲಿ ಅಗತ್ಯ ಸಿಬ್ಬಂದಿಗಳಿಲ್ಲ. ಅಭಿಯಂತರರು, ಆರೋಗ್ಯ ನಿರೀಕ್ಷಕರು ಬೇರೆ ಪಂಚಾಯಿತಿಗಳಿಂದ ವಾರಕ್ಕೆ ಎರಡು ದಿನ ಬರುತ್ತಿರುವುದರಿಂದ ಕೆಲಸಗಳು ವಿಳಂಬವಾಗುತ್ತಿದೆ. ಆದ್ದರಿಂದ ತಕ್ಷಣ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಪ್ರಮುಖರು ಮನವಿ ಮಾಡಿದರು.
ಪಟ್ಟಣದಲ್ಲಿರುವ ಬಡವರು ಹಾಗೂ ವಸತಿ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಜಾಗದ ಕೊರತೆಯಿಂದ ಸಾಧ್ಯವಾಗುತ್ತಿಲ್ಲ. ಆದ್ದರಿಂದ 5 ಎಕರೆ ಸರ್ಕಾರಿ ಜಾಗವನ್ನು ಮಂಜೂರು ಮಾಡುವಂತೆ ತಿಳಿಸಿದರು.
ಪ.ಪÀಂ ಯನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಚುರುಕುಗೊಳ್ಳಬೇಕು, ಪಂಚಾಯಿತಿ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಮತ್ತು ಮಳೆಹಾನಿ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ.ಪಂ ಉಪಾಧ್ಯಕ್ಷ ಸಂಜೀವ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಸದಸ್ಯರುಗಳಾದ ಶೀಲಾಡಿಸೋಜ, ಚಂದ್ರು, ಜೀವನ್, ಮಹೇಶ್, ಶುಭಕರ, ಎಸ್.ಮಹೇಶ್, ಸೋಮೇಶ್, ಶರತ್ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.

error: Content is protected !!