ಕಡಗದಾಳು ಶಿಕ್ಷಕರಿಗೆ ಸನ್ಮಾನ : ಸಾಧಿಸುವ ಚಲ ಇದ್ದಾಗ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯ : ಸಿವಿಲ್ ನ್ಯಾಯಾಧೀಶೆ ನೂರುನ್ನಿಸ ಅಭಿಪ್ರಾಯ

March 6, 2021

ಮಡಿಕೇರಿ ಮಾ.6 : ಸಾಧನೆಯ ಗುರಿ ಮತ್ತು ಸಾಧಿಸುವ ಚಲ ಇದ್ದಾಗ ಮಾತ್ರ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯವೆಂದು ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರೂ ಆಗಿರುವ ಕಾರ್ಯದರ್ಶಿ ನೂರುನ್ನಿಸ ತಿಳಿಸಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ 10 ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಸಾಧನೆ ಮಾಡಲು ಕಾರಣಕರ್ತರಾದ ಕಡಗದಾಳು ಪ್ರೌಢ ಶಾಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಗುರಿಯನ್ನಿಟ್ಟುಕೊಳ್ಳಬೇಕು. ಆ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿಕೊಳ್ಳಬೇಕೆಂದರು.
ಸರ್ಕಾರಿ ಶಾಲೆಯಲ್ಲೇ ವಿದ್ಯಾಭ್ಯಾಸ ಮಾಡಿದ ನಾನು ಇಂದು ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನನಗೆ ತೃಪ್ತಿ ಎನಿಸಿದೆ. ಹಲವು ಮಂದಿ ಸಾಧಕರು ಸರಕಾರಿ ಶಾಲೆಗಳಲ್ಲೇ ಶಿಕ್ಷಣ ಪಡೆದಿದ್ದು, ಸಾಧಕರನ್ನು ಮಾದರಿಯನ್ನಾಗಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರು ಉಳಿದು ವಿದ್ಯಾಭ್ಯಾಸದ ಬಗ್ಗೆ ಮಾತ್ರ ಗಮನ ಹರಿಸಬೇಕು. ಪೋಷಕರು ಕೂಡ ತಮ್ಮ ಮಕ್ಕಳ ವ್ಯಾಸಾಂಗಕ್ಕೆ ಉತ್ತಮ ವಾತಾವರಣವನ್ನು ಕಲ್ಪಿಸಿಕೊಡಬೇಕೆಂದು ನೂರುನ್ನಿಸ ಸಲಹೆ ನೀಡಿದರು.
ಪರಿಶ್ರಮ ಪಡುವ ಶಿಕ್ಷಕರನ್ನು ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ದಲಿತ ಸಂಘರ್ಷ ಸಮಿತಿ ಮಾದರಿ ಎನಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರೆಡ್‍ಕ್ರಾಸ್ ಸಂಸ್ಥೆಯ ಪ್ರಮುಖ ಹಾಗೂ ರೋಟರಿ ಸದಸ್ಯ ರವೀಂದ್ರ ರೈ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುತ್ತಿದ್ದಾರೆ. ಇದಕ್ಕೆ ಶಿಕ್ಷಕರ ಪರಿಶ್ರಮವೇ ಪ್ರಮುಖ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳು ಶಿಕ್ಷಕಣಕ್ಕೆ ಮೊದಲ ಆದ್ಯತೆ ನೀಡಿ ಉನ್ನತ ಹುದ್ದೆಯನ್ನು ಅಲಂಕರಿಸುವ ಗುರಿ ಹೊಂದಬೇಕೆಂದು ಹೇಳಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಸಂಸ್ಥೆ ವತಿಯಿಂದ ಉಚಿತ ಟ್ಯಾಬ್ ನೀಡುವುದಾಗಿ ಭರವಸೆ ನೀಡಿದರು.
ವೃತ್ತ ನಿರೀಕ್ಷಕ ದಿವಾಕರ್ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಅವರನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯವೆಂದರು.
ಕಡಗದಾಳು ಗ್ರಾ.ಪಂ ಅಧ್ಯಕ್ಷ ಜಯಣ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದುದ್ದಕ್ಕೂ ಗುರುಗಳನ್ನು ಸ್ಮರಿಸಿಕೊಳ್ಳಬೇಕು ಎಂದರು. ಗ್ರಾ.ಪಂ ವತಿಯಿಂದ ಶಾಲೆಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಹೆಚ್.ಎಲ್.ದಿವಾಕರ್ ಮಾತನಾಡಿ ಸಮಿತಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ಕಳೆದ 32 ವರ್ಷಗಳಿಂದ ದಲಿತ ವಿದ್ಯಾರ್ಥಿಗಳನ್ನು ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿದೆ ಎಂದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಂದೆ, ತಾಯಿಗಳ ಕನಸನ್ನು ನನಸು ಮಾಡಬೇಕೆಂದು ಕರೆ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ ಅವರು, ದಲಿತ ಸಂಘರ್ಷ ಸಮಿತಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಜೊತೆಗೆ ಶಿಕ್ಷಕರನ್ನೂ ಸನ್ಮಾನಿಸುತ್ತಿರುವುದು ಶ್ಲಾಘನೀಯವೆಂದರು.
ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ನಾಸರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ಹೆಚ್.ಎಲ್.ಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಅನಿತಾ ಸ್ವಾಗತಿಸಿ ಆರತಿ ನಿರೂಪಿಸಿದರು, ಶಿಕ್ಷಕಿ ಪಿ.ಎಸ್.ರೂಪ ವಂದಿಸಿದರು.

error: Content is protected !!