ಹುಲಿಯನ್ನು ನಾವು ಹಿಡಿಯುತ್ತೇವೆ : ಬೆಳ್ಳೂರು ಗ್ರಾಮದಲ್ಲಿ ಪ್ರತಿಭಟನಾಕಾರರ ಆಕ್ರೋಶ

March 8, 2021


ಮಡಿಕೇರಿ ಮಾ.8 : ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ತೋಟದ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಮೇಲೆ ಹುಲಿ ದಾಳಿ ಮಾಡಿ ಬಾಲಕನೋರ್ವ ಬಲಿಯಾಗಿರುವ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ.
ಹುಲಿ ಸೆರೆ ಕಾರ್ಯಾಚರಣೆಗಾಗಿ ಸಾಕಾನೆಯನ್ನು ಹೊತ್ತು ತಂದ ಅರಣ್ಯ ಇಲಾಖೆಯ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ಹುಲಿಯನ್ನು ಹಿಡಿಯಲು ನಮಗೆ ಅವಕಾಶ ನೀಡಿ ಎಂದು ಒತ್ತಾಯಿಸಿದ್ದಾರೆ.
ಕಳೆದ ಎರಡು ವಾರಗಳಲ್ಲಿ ಅಮಾಯಕ ಮೂರು ಜೀವಗಳು, ಹತ್ತಾರು ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಆದರೂ ಸರ್ಕಾರ ಮತ್ತು ಅರಣ್ಯ ಸಚಿವರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅರಣ್ಯ ಇಲಾಖೆ ಹುಲಿಯನ್ನು ಸೆರೆ ಹಿಡಿಯುವಲ್ಲಿ ವಿಫಲವಾಗಿದೆ, ಕೇವಲ ಸಾಕಾನೆಗಳ ಮೆರವಣಿಗೆ ಮಾಡುತ್ತಿದ್ದು, ಇದರಿಂದ ಯಾವುದೇ ಪ್ರಯೋಜನವಿಲ್ಲವೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮಗೆ ಹುಲಿ ಹಿಡಿಯಲು ಅವಕಾಶ ನೀಡಿದರೆ ಕೇವಲ ಮೂರು ದಿನಗಳಲ್ಲಿ ಹುಲಿಯನ್ನು ಬಂಧಿಸಿ ಅರಣ್ಯ ಇಲಾಖೆಗೆ ಒಪ್ಪಿಸುವುದಾಗಿ ಸವಾಲು ಹಾಕಿದ್ದಾರೆ.
ಅರಣ್ಯ ಸಚಿವರು ಸ್ಥಳಕ್ಕೆ ಬಾರದೆ ರಸ್ತೆ ತಡೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ವಿವಿಧ ಸಂಘಟನೆಗಳನ್ನು ಎಚ್ಚರಿಕೆಯನ್ನು ನೀಡಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

error: Content is protected !!