ತಾ.ಪಂ ಕೆಡಿಪಿ ಸಭೆ : ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳಿಸಲಾಗಿರುವ ಕಾರ್ಯಕ್ರಮಗಳ ಮಾಹಿತಿ ಪಡೆದ ತೆಕ್ಕಡೆ ಶೋಭಾ ಮೋಹನ್

April 8, 2021

ಮಡಿಕೇರಿ ಏ.8 : ವಿವಿಧ ಇಲಾಖೆಗಳಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ ಅನುಷ್ಠಾನಗೊಳಿಸಲಾಗಿರುವ ಕಾರ್ಯಕ್ರಮಗಳ ಸಂಬಂಧ ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಆವರು ಮಾಹಿತಿ ಪಡೆದರು.
ನಗರದ ತಾ.ಪಂ.ಸಭಾಂಗಣದಲ್ಲಿ ಬುಧವಾರ ನಡೆದ ತಾ.ಪಂ.ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲ್ಲೂಕಿನ ಅಂಗನವಾಡಿಗಳಿಗೆ ಕಾಲಮಿತಿಯೊಳಗೆ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಐಟಿಡಿಪಿ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಬಡವರಿಗೆ ತಲುಪಿಸಬೇಕು. ಕೋವಿಡ್-19 ಹಿನ್ನೆಲೆ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ವ್ಯವಸ್ಥಿತವಾಗಿರಬೇಕು ಎಂದರು.
ತೋಟಗಾರಿಕಾ ಇಲಾಖೆಯ ಕುರಿತು ಮಾತನಾಡಿ, ಕೃಷಿ ಭೂಮಿಗೆ ಪೈಪ್‍ಲೈನ್ ವ್ಯವಸ್ಥೆ ಮಾಡಬೇಕಿದೆ ಎಂದು ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಮೋದ್ ಹೇಳಿದರು.
ಕೃಷಿ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನ ಬಗ್ಗೆ ತಾ.ಪಂ.ಅಧ್ಯಕ್ಷರು ಮಾಹಿತಿ ಪಡೆದರು. ಶಿಕ್ಷಣ ಇಲಾಖೆಯ ಕುರಿತು ಮಾತನಾಡಿ, ಹತ್ತನೇ ತರಗತಿಯವರಿಗೆ ಮಾತ್ರ ತರಗತಿ ನಡೆಯುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಾ.ಪಂ.ಅಧ್ಯಕ್ಷರು ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆಯ ಕುರಿತು ಮಾಹಿತಿ ಪಡೆದ ಅಧ್ಯಕ್ಷರು 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಬೇಕು, ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.
ಸಭೆಯಲ್ಲಿ ತಾ.ಪಂ.ಉಪಾಧ್ಯಕ್ಷರಾದ ಬೊಳಿಯಾಡಿರ ಸಂತು ಸುಬ್ರಮಣಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಡಿ.ಇ.ಶ್ರೀಧರ ಹಾಗೂ ತಾ.ಪಂ.ಇಒ ಕವಿತ, ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್, ಸಿಡಿಪಿಒ ಅರುಂಧತಿ ಅವರು ತಮ್ಮ ಇಲಾಖೆಯ ಕಾರ್ಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

error: Content is protected !!