ಜಿ.ಪಂ ಮಾಜಿ ಅಧ್ಯಕ್ಷರ ಮೇಲೆ ಕುಶಾಲನಗರ ಸರ್ಕಲ್ ಇನ್ಸ್ ಪೆಕ್ಟರ್ ರಿಂದ ಹಲ್ಲೆ ಆರೋಪ : ಎಸ್ ಪಿ ಗೆ ದೂರು

April 8, 2021

ಮಡಿಕೇರಿ ಏ.8 : ಕುಶಾಲನಗರ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಜಿ.ಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶೋಕ್ ಆರೋಪಿಸಿದ್ದಾರೆ. ಈ ಬಗ್ಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಹಲ್ಲೆಯಿಂದ ಎದೆಯ ಭಾಗಕ್ಕೆ ತೀವ್ರ ಘಾಸಿಯಾಗಿದೆ ಎಂದು ಕುಶಾಲನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕುಟುಂಬದ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಸಂಜೆ ಪೊಲೀಸ್ ಠಾಣೆಗೆ ತೆರಳಿದ್ದಾಗ ಸರ್ಕಲ್ ಇನ್ಸ್‍ಪೆಕ್ಟರ್ ನನ್ನೊಂದಿಗೆ ದರ್ಪದಿಂದ ನಡೆದುಕೊಂಡಿದ್ದಾರೆ. “ಜನಸ್ನೇಹಿ ಪೊಲೀಸ್ ಠಾಣೆ ಎಂದು ಹೇಳುತ್ತೀರಿ, ಈ ರೀತಿ ನಡೆದುಕೊಳ್ಳುತ್ತಿದ್ದೀರಲ್ಲಾ” ಎಂದು ಪ್ರಶ್ನೆ ಮಾಡಿದ ಕಾರಣಕ್ಕಾಗಿ ನನ್ನ ಎದೆಯ ಭಾಗಕ್ಕೆ ಹಲ್ಲೆ ಮಾಡಿದ್ದಾರೆ. ಈ ಹಿಂದೆ ನನಗೆ ಹೃದಯ ಶಸ್ತ್ರ ಚಿಕಿತ್ಸೆಯಾಗಿದ್ದು, ಇದೀಗ ಮತ್ತೆ ಎದೆಗೆ ಘಾಸಿ ಮಾಡಿದ್ದಾರೆ, ಅಲ್ಲದೆ ಅವಾಚ್ಯ ಶಬ್ಧ ಬಳಸಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ.
ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಬಹುದು ಎನ್ನುವ ಕಾರಣಕ್ಕಾಗಿ ಮೈಸೂರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

error: Content is protected !!