ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಯೊಬ್ಬರಲ್ಲಿ ಜಾಗೃತಿ ಅಗತ್ಯ : ಶ್ರೀಕಂಠಮೂರ್ತಿ ಸಲಹೆ

April 17, 2021

ಮಡಿಕೇರಿ ಏ.17 : ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಪ್ರತಿಯೊಬ್ಬರೂ ಸಾಕಷ್ಟು ಮುನ್ನಚ್ಚರಿಕೆ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಅರಿವು ಮೂಡಿಸಬೇಕಿದೆ ಎಂದು ಜಿ.ಪಂ.ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ ಅವರು ಹೇಳಿದರು.
ನಗರದ ತಾ.ಪಂ.ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ವಹಿಸುವ ಸಂಬಂಧ ಗ್ರಾಮಗಳಲ್ಲಿ ವಹಿಸಬೇಕಾದ ಎಚ್ಚರಿಕೆ ಬಗ್ಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಆರೋಗ್ಯಯುತವಾಗಿರಲು ಮತ್ತು ಉತ್ತಮ ರೋಗ ನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಾಂಕ್ರಾಮಿಕ ರೋಗಗಳಿಂದ ದೂರವಿರಬೇಕು. ಆ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಆಗಾಗ ಕೈತೊಳೆದುಕೊಳ್ಳುವುದು, ಸ್ವಚ್ಛತೆ ಕಡೆ ಹೆಚ್ಚಿನ ಗಮನಹರಿಸಬೇಕಿದೆ ಎಂದು ಶ್ರೀಕಂಠಮೂರ್ತಿ ಅವರು ತಿಳಿಸಿದರು.
ಸರ್ಕಾರದ ನಿರ್ದೇಶನದಂತೆ 45 ವರ್ಷ ಮೇಲ್ಪಟ್ಟವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿ ಪಾಲಿಸುವುದು ಮತ್ತಿತರ ಬಗ್ಗೆ ಎಚ್ಚರವಹಿಸಬೇಕಿದೆ ಎಂದರು.
ಸ್ವಚ್ಛ ಭಾರತ ಅಭಿಯಾನದ ಸಮಾಲೋಚಕರಾದ ವಾಸುದೇವ ಅವರು ಸ್ವಚ್ಛತೆಗೆ ಆದ್ಯತೆ ನೀಡಿದ್ದಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳಿಂದ ದೂರವಿರಬಹುದಾಗಿದೆ. ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕಿದೆ. ಶುದ್ಧ ಕುಡಿಯುವ ನೀರು ಬಳಸಬೇಕಿದೆ ಎಂದು ಸಲಹೆ ಮಾಡಿದರು.
ಜಿ.ಪಂ.ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಕುಮಾರ್ ಅವರು ಕೋವಿಡ್-19 ನಿಯಂತ್ರಣ ಸಂಬಂಧ ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದರು.

error: Content is protected !!