ಮುಂಗಾರು ಮಳೆ ಮುನ್ನೆಚ್ಚರಿಕೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

May 14, 2021

ಮಡಿಕೇರಿ ಮೇ 14 : ಕಳೆದ ಮೂರು ವರ್ಷ ಆಗಸ್ಟ್ ಮೊದಲ ಮತ್ತು ಎರಡನೇ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಉಂಟಾಗಿತ್ತು, ಆದ್ದರಿಂದ ಈ ಬಾರಿ ಪ್ರಾಕೃತಿಕ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಕಾರ್ಯ ಪ್ರವೃತರಾಗಬೇಕೆಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.
ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿಗಳು ಶುಕ್ರವಾರ ಜೂಮ್ ಆ್ಯಪ್ ಮೂಲಕ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದರು. ಹಿರಿಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಳೆಹಾನಿ ಕುರಿತು ಚರ್ಚಿಸಿದರು.
ಗುಡ್ಡಕುಸಿತ ಉಂಟಾಗುವ ಪ್ರದೇಶಗಳ ಮೇಲೆ ನಿಗಾವಹಿಸಬೇಕು. ಅಗತ್ಯವಿದ್ದಲ್ಲಿ ಸ್ಥಳೀಯ ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವ ಸಂಬAಧ ಮುಂಚಿತವಾಗಿ ಮಾಹಿತಿ ನೀಡಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ಸ್ಥಳೀಯ ನೋಡಲ್ ಅಧಿಕಾರಿಗಳ ಸಹಾಯದೊಂದಿಗೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಘಟನೆ ಬಗ್ಗೆ ನೇರವಾಗಿ ದೂರವಾಣಿ ಮೂಲಕ ಮಾಹಿತಿ ನೀಡಬೇಕು ಎಂದು ತಹಶೀಲ್ದಾರರಿಗೆ ಸೂಚನೆ ನೀಡಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸನ್ನದ್ಧವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ನಿಯೋಜಿತ ನೋಡಲ್ ಅಧಿಕಾರಿಗಳು ಮತ್ತು ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಕಲ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.
ತಹಶೀಲ್ದಾರ್ ಯೋಗಾನಂದ, ಗೋವಿಂದರಾಜು, ಪ್ರಕಾಶ್ ಅವರು ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿ.ಪಂ ಉಪ ಕಾರ್ಯದರ್ಶಿ ಲಕ್ಷ್ಮಿ, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಚಂದನ್, ಪೌರಾಯುಕ್ತರಾದ ರಾಮದಾಸ್, ಲೋಕೋಪಯೋಗಿ, ಜಿ.ಪಂ., ಸೆಸ್ಕ್ ಎಂಜಿನಿಯರ್‌ಗಳು ಇತರರು ಹಾಜರಿದ್ದರು.

error: Content is protected !!