ಮನೆ ಮನೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡಿ, ಸೋಂಕಿತ ಪ್ರಕರಣ ನಿಯಂತ್ರಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿರ್ದೇಶನ

June 10, 2021

ಮಡಿಕೇರಿ ಜೂ.10 : ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಸೇರಿದಂತೆ ಕೆಲವು ಕಡೆಗಳಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಇಂತಹ ಪ್ರದೇಶದ ಗ್ರಾಮಗಳ ಮನೆ ಮನೆಗೆ ತೆರಳಿ ರ‍್ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಿ ಸೋಂಕಿತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವಂತೆ ತಹಶೀಲ್ದಾರರು ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.
ತಹಶೀಲ್ದಾರರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ಜೊತೆ ಗುರುವಾರ ವಿಡಿಯೊ ಸಂವಾದಲ್ಲಿ ಅವರು ಮಾತನಾಡಿದರು.
ಸೋಂಕಿತರನ್ನು ಅನವಶ್ಯಕವಾಗಿ ಗೃಹ ಸಂಪರ್ಕ ತಡೆಯಲ್ಲಿರಿಸದೆ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು. ಇದರಿಂದ ಸೋಂಕಿತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಬಹುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸಂಚಾರಿ ಆರೋಗ್ಯ ತಂಡ ಸರಿಯಾಗಿ ಕೆಲಸ ಮಾಡಿದರೆ ಗ್ರಾಮ ಮಟ್ಟದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಬಹುದಾಗಿದೆ. ರ‍್ಯಾಟ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಕೋವಿಡ್-19 ಪ್ರಕರಣ ಸಂಬಂಧಿಸಿದಂತೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ಕೆಲವು ಗ್ರಾಮಗಳನ್ನು ಹಾಟ್‌ಸ್ಪಾಟ್ ಪ್ರದೇಶವೆಂದು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಾಗಿ ಮಾಡಬೇಕು ಎಂದು ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಕೋವಿಡ್ ಪರೀಕ್ಷೆ ಹೆಚ್ಚು ಮಾಡಬೇಕು. ಗ್ರಾಮಗಳಲ್ಲಿ ಕೋವಿಡ್ ಸೋಂಕಿತ ಪ್ರಕರಣ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು.
ಕೋವಿಡ್ 19 ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಹಲವು ಮಾಹಿತಿ ನೀಡಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರಲತಾ ಸೋಮಲ್ ಅವರು ಕೊಡಗು ಜಿಲ್ಲೆಯಲ್ಲಿ ಇದೇ ಜೂನ್ 12 ಮತ್ತು 13 ರಂದು ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಸಿಸಲಾಗಿದೆ. ಆದ್ದರಿಂದ ಎಲ್ಲರೂ ಎಚ್ಚರ ವಹಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾತನಾಡಿ ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 51 ಗ್ರಾ.ಪಂ.ಗಳ 72 ಗ್ರಾಮಗಳನ್ನು ಸೂಕ್ಷ್ಮ ಪ್ರದೇಶವೆಂದು ಗುರ್ತಿಸಲಾಗಿದೆ. ಹಾಗೆಯೇ 57 ಗ್ರಾಮಗಳನ್ನು ಪ್ರವಾಹ ಪೀಡಿತ ಮತ್ತು 23 ಪ್ರದೇಶಗಳನ್ನು ಭೂಕುಸಿತ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶವೆಂದು ಗುರ್ತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಹಾಗೆಯೇ ಜಿಲ್ಲೆಯ 18 ಕಡೆಗಳಲ್ಲಿ ತಾತ್ಕಾಲಿಕ ಗೋಶಾಲೆ ತೆರಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಹಾರ ಕೇಂದ್ರಗಳಲ್ಲಿ ಕನಿಷ್ಠ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಗಮನಹರಿಸಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಕೆ, ಶೌಚಾಲಯ, ವೈದ್ಯಕೀಯ ಕಿಟ್, ವೈಯಕ್ತಿಕ ಸ್ವಚ್ಚತೆ ಹೀಗೆ ಹಲವು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 50 ಸಾವಿರ ರೂ ಬಿಡುಗಡೆ ಮಾಡಲಾಗಿದ್ದು, ಅಗತ್ಯ ಮುನ್ನೆಚ್ಚರ ವಹಿಸಬೇಕು. ನೋಡಲ್ ಅಧಿಕಾರಿಗಳು ಆಗಾಗ ವಿವಿಧೆಡೆ ಭೆಟಿ ನೀಡಿ ಪರಿಶೀಲಿಸಬೇಕು ಎಂದು ಅವರು ಹೇಳಿದರು.
ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿಪಂ.ಉಪ ಕಾರ್ಯದರ್ಶಿ ಲಕ್ಷ್ಮಿ, ತಹಶೀಲ್ದಾರ ಮಹೇಶ್, ನೋಡಲ್ ಅಧಿಕಾರಿಗಳಾದ ಪಿ.ಶ್ರೀನಿವಾಸ್, ಶಶಿಧರ್, ಶ್ರೀಕಂಠಯ್ಯ, ಲಿಂಗರಾಜು, ಶೇಖರ್, ಡಾ.ಆನಂದ, ಡಾ.ಮಹೇಶ್, ಕೆ.ಟಿ.ದರ್ಶನ್, ಶಿವರಾಮ್, ಎಸ್.ವಿ,ರಾಮದಾಸ್, ನಟರಾಜು, ಅನನ್ಯ ವಾಸುದೇವ ಇತರರು ಇದ್ದರು.

error: Content is protected !!