ತಪ್ಪಿತಸ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಒತ್ತಾಯ

June 12, 2021

ಮಡಿಕೇರಿ ಜೂ.12 : ವಿರಾಜಪೇಟೆಯ ಮಾನಸಿಕ ಅಸ್ವಸ್ಥ ವ್ಯಕ್ತಿ ರಾಯ್ ಡಿಸೋಜ ಅವರ ಸಾವಿಗೆ ಕಾರಣಕರ್ತರಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ತಾಯಿಗೆ ಸರ್ಕಾರ ಪರಿಹಾರ ಧನ ಘೋಷಿಸಬೇಕೆಂದು ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪೊಲೀಸರ ಹಲ್ಲೆಯಿಂದಲೇ ರಾಯ್ ಡಿಸೋಜ ಸಾವನ್ನಪ್ಪಿದ್ದಾರೆ ಎನ್ನುವ ಆರೋಪವಿರುವುದರಿಂದ ಸರ್ಕಾರ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಉತ್ತಮ ಪೊಲೀಸ್ ಅಧಿಕಾರಿಗಳನ್ನು ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಬೆರಳೆಣಿಕೆಯ ಪೊಲೀಸರ ತಪ್ಪಿನಿಂದಾಗಿ ಇಡೀ ವ್ಯವಸ್ಥೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡುತ್ತಿದೆ. ಅಮಾಯಕರ ಮೇಲೆ ದೌರ್ಜನ್ಯ ನಡೆಸುವ ಪೊಲೀಸರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ವಿರಾಜಪೇಟೆ ಠಾಣೆಯಲ್ಲಿ ರಾಯ್ ಡಿಸೋಜ ಅವರನ್ನು ಪೊಲೀಸರು ನಡೆಸಿಕೊಂಡ ರೀತಿಯನ್ನು ಸಮಗ್ರ ತನಿಖೆಯ ಮೂಲಕ ಬಯಲಿಗೆಳೆಯಬೇಕು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತಿನಲ್ಲಿಡಬೇಕು. ಮೃತರ ತಾಯಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಇಸಾಕ್ ಖಾನ್ ಒತ್ತಾಯಿಸಿದ್ದಾರೆ.
ಪೊಲೀಸ್ ವ್ಯವಸ್ಥೆಗೆ ಕಳಂಕ ತರುವವರನ್ನು ಜಿಲ್ಲೆಯ ಯಾವುದೇ ಠಾಣೆಯಲ್ಲಿ ಉಳಿಸಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.

error: Content is protected !!